ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಸಮುದಾಯಕ್ಕೆ ನ್ಯಾಯ ಕೊಡಿಸಲು ಕಾನೂನು ಹೋರಾಟ ನಡೆಸುವುದರ ಜತೆಗೆ ಚುನಾವಣೆಗೂ ಸಿದ್ಧವಾಗಿರಲು ಸರಕಾರ ನಿರ್ಧರಿಸಿದೆ. ಹಾಗೆಯೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ 3 ತಿಂಗಳ ಕಾಲಾವಕಾಶ ಕೋರಲು ತೀರ್ಮಾನಿಸಿದೆ.
ಸುಪ್ರೀಂ ಆದೇಶದ ಬಗ್ಗೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಕಾನೂನು ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಿದ್ದಾರೆ. ಆದೇಶ ಜಾರಿಗೊಳಿಸಲು ರಾಜ್ಯದಲ್ಲಿ ಎದುರಾಗುವ ಸಾಂವಿಧಾನಿಕ ಸಮಸ್ಯೆಗಳ ಬಗ್ಗೆ ಕೋರ್ಟ್ ಗಮನಕ್ಕೆ ತರಲು ಪುನರ್ ಪರಿಶೀಲನೆ ಅರ್ಜಿ ಸಲ್ಲಿಸುವ ಬಗ್ಗೆ ನಿರ್ಧರಿಸಲಾಗಿದೆ.
ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಪ್ರಕರಣಗಳ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿ, ಒಬಿಸಿ ಮೀಸಲಾತಿ ಪ್ರಕ್ರಿಯೆ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಪರ್ಯಾಯವಾಗಿ ಈಗಿನಿಂದಲೇ ಚುನಾವಣೆಗೂ ಸಿದ್ಧವಾಗಲು ಸರಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಹಿಂದುಳಿದ ವರ್ಗಗಳ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಆಯೋಗ ರಚಿಸಲಾಗಿದೆ. ಇದುವರೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಂವಿಧಾನಾತ್ಮಕವಾಗಿ ಹಿಂದುಳಿದ ವರ್ಗಗಳಿಗೆ ಕಾನೂನುರೀತ್ಯಾ ಪ್ರಾತಿನಿಧ್ಯ ನೀಡುತ್ತ ಬರಲಾಗಿದೆ. ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಬೇಕೆಂಬುದು ಸರಕಾರ ಮತ್ತು ಎಲ್ಲ ಪಕ್ಷಗಳ ಅಭಿಪ್ರಾಯವಾಗಿದ್ದು, ಈ ನಿಟ್ಟಿನಲ್ಲಿ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸರಕಾರದ ನಿಲುವಿನ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಒಬಿಸಿಯನ್ನು ಪರಿಗಣಿಸುವ ಪ್ರಕ್ರಿಯೆ ಸಮಯ ತೆಗೆದುಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಮದ್ಯಪ್ರದೇಶದವರು ಆಯೋಗ ರಚಿಸಿ ವರದಿಯನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ನೀಡಿದ್ದರು. ಈ ಸಂದರ್ಭದಲ್ಲಿ ಬಂದ ತೀರ್ಪಿನ ಬಗ್ಗೆ ಪುನರ್‌ಪರಿಶೀಲನೆ ಅರ್ಜಿ ಸಲ್ಲಿಸಿ¨ªಾರೆ. ರಾಜ್ಯದಲ್ಲಿ ಮೀಸಲಾತಿ ಬಗ್ಗೆ ಹಲವಾರು ವರದಿಗಳಿದ್ದು, ಅವುಗಳನ್ನು ಬಳಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದರು.
ಮೇ 17ರಂದು ವಿಚಾರಣೆ :
ಈ ಮಧ್ಯೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ಜಿ.ಪಂ. ಮತ್ತು ತಾ.ಪಂ. ಚುನಾವಣೆಗೆ ಸಂಬಂಧಿಸಿದ ಅರ್ಜಿಯನ್ನು ಮೇ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೈಕೋರ್ಟ್ ಹೇಳಿದೆ. ಈ ಸಂಬಂಧ ರಾಜ್ಯ ಚುನಾವಣ ಆಯೋಗ ಸಲ್ಲಿಸಿದ ಮೆಮೋ ಪರಿಗಣಿಸಿದ ನ್ಯಾ| ಬಿ.ಎಂ. ಶ್ಯಾಮ್‌ಪ್ರಸಾದ್ ಮತ್ತು ನ್ಯಾ| ಎಂ.ಜಿ.ಎಸ್. ಕಮಾಲ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಗುರುವಾರ ಈ ನಿರ್ಧಾರ ತಿಳಿಸಿತು.
ಒಬಿಸಿ ಮೀಸಲಾತಿ ಇಲ್ಲದೆ ನಾವು ಚುನಾವಣೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ಮೂರು ತಿಂಗಳ ಕಾಲಾವಕಾಶ ಕೇಳಲು ತೀರ್ಮಾನಿಸಲಾಗಿದೆ. ಚುನಾವಣೆ ನಡೆಸಲು ಸರಕಾರ ಸಿದ್ಧವಿದೆ. ಆದರೆ ಇರುವ ಅಡಚಣೆಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು.
– ಜೆ.ಸಿ. ಮಾಧುಸ್ವಾಮಿ, ಸಚಿವ