Advertisement

ಸಿದ್ದರಾಮಯ್ಯ ವಿರುದ್ಧ “ಕೈ’ನಲ್ಲಿ ಆಕ್ಷೇಪ

11:18 PM Feb 29, 2020 | Lakshmi GovindaRaj |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಅವರನ್ನು ಹೊಗಳಿರುವುದು ಕಾಂಗ್ರೆಸ್‌ ನಾಯಕರ ಆಕ್ಷೇಪಕ್ಕೆ ಕಾರಣವಾಗಿದೆ.

Advertisement

ಈ ಬಗ್ಗೆ ಪಕ್ಷದ ಕೆಲ ಹಿರಿಯ ನಾಯಕರು, ತಮ್ಮ ಆಪ್ತರ ಎದುರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದ್ದು, ಈ ಬೆಳವಣಿಗೆಯಿಂದ ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆ ಮಾಡಿದಂತಾಗಿದೆ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ 78ನೇ ಹುಟ್ಟು ಹಬ್ಬಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಎಸ್‌.ಎಂ.ಕೃಷ್ಣ ಸೇರಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಪ್ರಮುಖ ನಾಯಕರಿಗೆ ಆಹ್ವಾನ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಎಲ್ಲರ ನಿವಾಸಗಳಿಗೆ ತೆರಳಿ ಆಹ್ವಾನ ನೀಡಿದ್ದರು.

ಆದರೆ, ಅಭಿನಂದನಾ ಕಾರ್ಯಕ್ರಮದ ದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನಾ ಕಾರ್ಯಕ್ರಮಕ್ಕೆ ಆಗಮಿಸಲೇಬೇಕೆಂದು ಆಹ್ವಾನ ನೀಡಿದ್ದರು ಎಂದು ಹೇಳಲಾಗುತ್ತಿದ್ದು, ಅದೇ ಕಾರಣಕ್ಕೆ ಸಿದ್ದರಾಮಯ್ಯ ಅಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂಬ ಮಾತು ಕೇಳಿ ಬಂದಿತ್ತು. ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಡಿಯೂರಪ್ಪ ಬಗ್ಗೆ ಮೆಚ್ಚುಗೆ ಮಾತನಾಡಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಮೆಚ್ಚುಗೆಗೂ ಪಾತ್ರವಾಯಿತು.

ಆದರೆ, ಈ ಬೆಳವಣಿಗೆ ಕಾಂಗ್ರೆಸ್‌ನಲ್ಲಿ ಸಾಕಷ್ಟು ಆಕ್ಷೇಪಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಪೂರ್ವ ನಿರ್ಧರಿತ. ಮೈತ್ರಿ ಸರ್ಕಾರದ ಅವಧಿಯಲ್ಲಿ ಪಕ್ಷದಲ್ಲಿ ಅಸಮಾಧಾನಗೊಂಡಿದ್ದ ಶಾಸಕರನ್ನು ರಾಜೀನಾಮೆ ಕೊಡಿಸುವಲ್ಲಿ ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಬೆಂಬಲವಿತ್ತು ಎಂದು ಪಕ್ಷದ ನಾಯಕರಲ್ಲಿ ಮೂಡಿದ್ದ ಅನುಮಾನಕ್ಕೆ ಈ ಬೆಳವಣಿಗೆ ಪೂರಕವಾಗಿದೆ ಎಂಬ ಮಾತು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ.

Advertisement

ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಸಂದರ್ಭದಲ್ಲಿ ಜೆಡಿಎಸ್‌ ಧ್ವಜ ಹಿಡಿದುಕೊಂಡಿದ್ದಕ್ಕೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಸಿದ್ದರಾಮಯ್ಯ ಅವರೇ ತಮ್ಮ ಆಪ್ತರ ಎದುರು ಮಾತನಾಡಿದ್ದು ಬಹಿರಂಗಗೊಂಡಿತ್ತು. ಡಿ.ಕೆ.ಶಿವಕುಮಾರ್‌ ಬೇರೆ ಪಕ್ಷದ ವೇದಿಕೆ ಹತ್ತಿರಲಿಲ್ಲ. ಅವರಾಗಿಯೇ ಸ್ವಾಗತಕ್ಕೆ ಆಗಮಿಸಿದಾಗ ಆ ಪಕ್ಷದ ಧ್ವಜ ಹಿಡಿದಿದ್ದರು.

ಆದರೆ, ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಾಗಿ ಆಡಳಿತ ಪಕ್ಷ ಹಾಗೂ ಮುಖ್ಯಮಂತ್ರಿ ಅಭಿನಂದನಾ ಕಾರ್ಯಕ್ರಮದ ವೇದಿಕೆಯಲ್ಲಿ ಪಾಲ್ಗೊಂಡು ಅವರನ್ನು ಬಹಿರಂಗವಾಗಿ ಹೊಗಳಿದರೆ, ಪಕ್ಷದ ಕಾರ್ಯಕರ್ತರಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ ಎಂದು ವಿರೋಧಿ ಬಣದ ನಾಯಕರು ಆಪ್ತರ ಎದುರು ಅಸಮಾಧಾನ ಹೊರ ಹಾಕುತ್ತಿದ್ದಾರೆಂದು ತಿಳಿದು ಬಂದಿದೆ.

ಬಿಎಸ್‌ವೈ ಪರೋಕ್ಷ ಸಂದೇಶ?: ಅಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ರಾಜಕೀಯ ಹೋರಾಟ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರೇ ಕಾರಣ ಎನ್ನುವ ಮೂಲಕ ಬಿಜೆಪಿಯ ಯಡಿಯೂರಪ್ಪ ವಿರೋಧಿ ಬಣಕ್ಕೆ ಪರೋಕ್ಷ ಸಂದೇಶ ರವಾನೆ ಮಾಡಿದರು ಎಂದು ವಿಶ್ಲೇಷಿಸಲಾಗುತ್ತಿದೆ. ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ ನಂತರ ಪಕ್ಷದಲ್ಲಿ ನಾಯಕತ್ವ ಬದಲಾಗುತ್ತದೆ ಎಂಬ ಚರ್ಚೆಗಳು ಯಡಿಯೂರಪ್ಪ ವಿರೋಧಿ ಬಣ ಹೈಕಮಾಂಡ್‌ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನುವವರಿಗೂ ಸಿದ್ದರಾಮಯ್ಯ ಮೂಲಕ ಯಡಿಯೂರಪ್ಪ ಸಂದೇಶ ರವಾನಿಸಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

ನಮ್ಮ ನಾಯಕರಾದ ಸಿದ್ದರಾಮಯ್ಯ ಅವರೇ, ನಾವು ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಹೋರಾಡ ಬೇಕಾಗಿದೆ. ಆದರೆ, ನೀವು ಸಿಎಂ ಯಡಿಯೂರಪ್ಪ ಅವರ ಜನ್ಮದಿನಕ್ಕೆ ಶುಭಾಶಯ ಕೋರಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದೀರಾ. ತಾವು ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಳುಹಿಸುತ್ತಿರುವ ಸಂದೇಶ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಇಂತಹ ಸನ್ನಿವೇಶ ಪುನರಾವರ್ತನೆಯಾಗದಂತೆ ಜಾಗೃತೆ ವಹಿಸಲು ಮನವಿ ಮಾಡುತ್ತೇವೆ.
-ಸಚಿನ್‌ ಮೀಗಾ, ಕೆಪಿಸಿಸಿ ಕಿಸಾನ್‌ ಘಟಕದ ರಾಜ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next