ಬೆಂಗಳೂರು:ಸಾಮಾಜಿಕ ಜಾಲತಾಣದಲ್ಲಿ ಕೋಮುವೊಂದರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ನವೀನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ದಿಢೀರ್ ನಡೆದ ಹಿಂಸಾಚಾರ ಪ್ರಕರಣದಲ್ಲಿ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಿದ ಹಾಗೂ ಪೊಲೀಸರ ಮೇಲೆ ಹಲ್ಲೆಗೈದ ಆರೋಪದಲ್ಲಿ ಈವರೆಗೆ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪಂಥ್ ಅವರು ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ನಗರದಲ್ಲಿ ಶಾಂತಿ ಕಾಪಾಡಲು ಎಲ್ಲರೂ ಪೊಲೀಸರೊಂದಿಗೆ ಸಹಕರಿಸಬೇಕಾಗಿ ವಿನಂತಿ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಏನಿದು ಘಟನೆ: ಪುಲಿಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಹೋದರ ಸಂಬಂಧಿ ಎನ್ನಲಾದ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಒಂದು ಸಮುದಾಯದ ಕುರಿತು ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಒಂದು ಸಮುದಾಯವರು ಏಕಾಏಕಿ ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಅಷ್ಟೇ ಅಲ್ಲ ವಾಹನಗಳಿಗೆ ಬೆಂಕಿ ಹಚ್ಚಿ, ಪೊಲೀಸರ ಮೇಲೂ ಹಲ್ಲೆ ನಡೆಸಿರುವುದಾಗಿ ವರದಿ ತಿಳಿಸಿದೆ. ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ ಗೆ ಮೂವರು ಬಲಿಯಾಗಿದ್ದಾರೆ.