Advertisement

Obstructing police duty: ಶಾಸಕ ಹರೀಶ್‌ ಪೂಂಜ ವಿರುದ್ಧ ಪ್ರಕರಣ: ಮಧ್ಯಂತರ ತಡೆ ವಿಸ್ತರಣೆ

12:30 AM Aug 23, 2024 | Team Udayavani |

ಬೆಂಗಳೂರು: ಪರವಾನಗಿ ಪಡೆಯದೆ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯೋರ್ವನ ಬಂಧನ ಖಂಡಿಸಿ ಪೊಲೀಸ್‌ ಠಾಣೆ ಮುಂದೆ ಪ್ರತಿಭಟಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ವಿರುದ್ಧ ದಾಖಲಿಸಲಾದ ಪ್ರಕರಣ ಸಂಬಂಧ ನೀಡಿದ ಮಧ್ಯಂತರ ತಡೆಯನ್ನು ಹೈಕೋರ್ಟ್‌ ಪುನಃ ವಿಸ್ತರಿಸಿದೆ.

Advertisement

ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಶಾಸಕ ಹರೀಶ್‌ ಪೂಂಜ ಸಲ್ಲಿಸಿದ್ದ ಅರ್ಜಿಯ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿ, ಅರ್ಜಿದಾರರು ಹಾಲಿ ಶಾಸಕರಾಗಿದ್ದು, ಅವರಲ್ಲದೆ ಒರ್ವ ವಿಧಾನಪರಿಷತ್‌ ಸದಸ್ಯರು ಸೇರಿದಂತೆ ಮೂವತ್ತಕ್ಕೂ ಅಧಿಕ ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನೋಟಿಸ್‌ ನೀಡದೆ ಪೊಲೀಸರು ಕ್ರಮಕ್ಕೆ ಮುಂದಾದ ಹಿನ್ನೆಲೆಯಲ್ಲಿ ಸ್ಥಳೀಯ ಚುನಾಯಿತ ಜನಪ್ರತಿನಿಧಿಯಾಗಿ ಅರ್ಜಿದಾರರು ಠಾಣೆಗೆ ಹೋಗಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದಾರೆ. ಅವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿಲ್ಲ ಮತ್ತು ಕಾನೂನು ಕೈಗೆತ್ತಿಕೊಂಡಿಲ್ಲ ಎಂದು ವಿವರಿಸಿದರು.

ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌, ಅರ್ಜಿದಾರರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಪ್ರಕರಣದ ತನಿಖೆ ನಡೆಯಬೇಕು. ಆದ್ದರಿಂದ ಎಫ್ಐಆರ್‌ ರದ್ದುಪಡಿಸಬಾರದು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು. ಅಲ್ಲದೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಆಗಸ್ಟ್‌ 1ರಂದು ಹೊರಡಿಸಿದ್ದ ಮಧ್ಯಂತರ ಆದೇಶ ವಿಸ್ತರಿಸಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next