Advertisement

4244 ಅಂಗನವಾಡಿ ಕೇಂದ್ರಗಳ ಪ್ರಾರಂಭಕ್ಕೆ ಅಧಿಕೃತ ಆದೇಶ: ಸಚಿವ ಹಾಲಪ್ಪ ಆಚಾರ್‌

05:04 PM Sep 03, 2022 | Team Udayavani |

ಬೆಂಗಳೂರು: ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲಾ ಪೂರ್ವ ಶಿಕ್ಷಣದ ಪ್ರಯೋಜನ ಪಡೆಯುವ ಹಾಗೂ 8100 ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವಂತಹ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಇದಕ್ಕಾಗಿ 268.98 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್‌ ತಿಳಿಸಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಯವರ ಪೋಷಣ್‌ ಮಾಸಾಚರಣೆಯ ಘೋಷಣೆಯ ಬೆನ್ನಲ್ಲೇ ಈ ಅಧಿಕೃತ ಆದೇಶ ಹೊರಟಿರುವುದು ಬಹಳ ಸಂತಸದ ವಿಷಯವಾಗಿದೆ. ಕರ್ನಾಟಕ ಅಂಗನವಾಡಿ ಮತ್ತು ಪೋಷನ್‌ ಅಭಿಯಾನ 2.0 ಎಂದು ಮರುನಾಮಾಂಕಿತಗೊಂಡಿರುವ ಸಮಗ್ರ ಮಕ್ಕಳ ಅಭಿವೃದ್ದಿ ಯೋಜನೆಯನ್ನು 1975 ರಲ್ಲಿ ಪ್ರಾರಂಭಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಈ ಯೋಜನೆಯ ಅಡಿಯಲ್ಲಿ ಒಟ್ಟು 66,361 ಅಂಗನವಾಡಿ ಕೇಂದ್ರಗಳು ಸ್ಥಾಪಿತವಾಗಿದ್ದು, ಅವುಗಳ ಮೂಲಕ ರಾಜ್ಯದ ಮಕ್ಕಳಿಗೆ, ಕಿಶೋರಿಯರಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕತೆ ಮತ್ತು ಆರೋಗ್ಯ ಶಿಕ್ಷಣ ಮುಂತಾದ 6 ಸೇವೆಗಳನ್ನು ಒದಗಿಸಲಾಗುತ್ತಿದೆ. ಪ್ರಸ್ತುತ ಈ ಯೋಜನೆಯ ಅಡಿ ಶೇಕಡಾ 56 ರಷ್ಟು ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ನೀಡಲು ಸಾಧ್ಯವಾಗಿದೆ. ಈ ಯೋಜನೆಯಿಂದ ಹೊರಗಿರುವ ಕಡಿಮೆ ಆದಾಯದ ಜನಸಂಖ್ಯೆಯು ವಾಸಿಸುವ ಪ್ರದೇಶಗಳು ಹೆಚ್ಚಾಗಿದ್ದು, ಅವರಿಗೆ 6 ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ನಿರ್ಧಾರ ತಗೆದುಕೊಂಡಿದೆ ಎಂದು ಹೇಳಿದ್ದಾರೆ.

ರಾಜ್ಯ ಸರಕಾರ ತನ್ನ ಅನುದಾನದಲ್ಲಿಯೇ ಈ ಹೊಸ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸುತ್ತಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ ಅವರು ತಮ್ಮ 76 ನೇ ವರ್ಷದ ಸ್ವಾತಂತ್ರೋತ್ಸವ ಭಾಷಣದಲ್ಲಿ ಘೋಷಿಸಿದ ಒಂದು ತಿಂಗಳ ಒಳಗಾಗಿಯೇ ಅನುಷ್ಠಾನದತ್ತ ಸ್ಪಷ್ಟ ಹೆಜ್ಜೆಯನ್ನು ಇಟ್ಟಿರುವುದು ಬಹಳ ಸಂತಸದ ವಿಷಯವಾಗಿದೆ. ಈ ಅಂಗನವಾಡಿ ಕೇಂದ್ರಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next