Advertisement

Priyank Kharge ಕಲುಷಿತ ನೀರು ಪೂರೈಕೆಯಾದರೆ ಅಧಿಕಾರಿಗಳೇ ಹೊಣೆ

12:43 AM May 30, 2024 | Team Udayavani |

ಬೆಂಗಳೂರು: ಗ್ರಾಮೀಣ ಜನವಸತಿಗಳಿಗೆ ಪೂರೈಸುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದಿದ್ದರೆ ಅಂತಹ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

Advertisement

ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲ ಕಾರ್ಯಪಾಲಕ ಅಭಿಯಂತ‌ರಿಗೆ ಪತ್ರ ಬರೆದು ಈ ಎಚ್ಚರಿಕೆ ಕೊಟ್ಟಿದ್ದಾರೆ.

ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮತ್ತು ಆಯಾ ಗ್ರಾಮ ಪಂಚಾಯತ್‌ನ ಜವಾಬ್ದಾರಿ. ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಲ್ಲದೇ ಪ್ರಾಣಹಾನಿಗಳು ಕೂಡ ಸಂಭವಿಸಿರುತ್ತವೆ. ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲ ಸಂಬಂಧಪಟ್ಟ ಅಧಿಕಾರಿಗಳಿಗೆ ಇಲಾಖೆಯಿಂದ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಲಾಗಿದ್ದರೂ, ಕೆಲ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಕರಣಗಳು ಪುನರಾವರ್ತನೆಯಾಗುತ್ತಿರುವುದು ಹೆಚ್ಚಾಗಿ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ನೀರಿನ ತೊಟ್ಟಿ, ಜಲಾಗಾರಗಳು ಸುಸ್ಥಿಯಲ್ಲಿರಲಿ
ಕುಡಿಯುವ ನೀರಿನ ಸರಬರಾಜಿಗಾಗಿ ಅಳವಡಿಸಿರುವ ಕೊಳವೆಗಳಲ್ಲಿ ಮಳೆ ನೀರು, ಚರಂಡಿ ನೀರು ಮತ್ತು ಇತರ ಕಲುಷಿತ ನೀರು ಸೇರುತ್ತಿರುವುದರಿಂದ ಮತ್ತು ನೀರಿನ ಶೇಖರಣೆ ಮಾಡುವ ಕಿರು ನೀರು ಸರಬರಾಜು ಮಾಡುವ ನೀರಿನ ತೊಟ್ಟಿಗಳು ಹಾಗೂ ಜಲಾಗಾರಗಳನ್ನು ಕಾಲಕಾಲಕ್ಕೆ ಸರಿಯಾಗಿ ಸ್ವಚ್ಛಗೊಳಿಸುವುದು ಹಾಗೂ ಕ್ಲೋರಿನೇಷನ್‌ ಕೈಗೊಳ್ಳುವುದು ಮತ್ತು ನೀರಿನ ಮೂಲಗಳಾದ ಕೊಳವೆಬಾವಿಗಳ ಸುತ್ತಮುತ್ತಲೂ ನಿಲ್ಲುವ ಕೊಳಚೆ ನೀರನ್ನು ಸ್ವಚ್ಛಗೊಳಿಸುವುದು ಮುಂತಾದ ಮುಂಜಾಗರೂಕತೆ ಕ್ರಮಗಳ ಮೂಲಕ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಗಂಭೀರವಾಗಿ ಪರಿಗಣಿಸಲಾಗುವುದು
ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲ ಕಾಲಕ್ಕೆ ಮೇಲ್ವಿಚಾರಣೆ ನಡೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಸೂಚನೆ ನೀಡಿರುವ ಸಚಿವ ಪ್ರಿಯಾಂಕ್‌ ಖರ್ಗೆ, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷತನದಿಂದ ಪ್ರಕರಣಗಳು ಪುನಾರಾವರ್ತನೆ ಆದಲ್ಲಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next