Advertisement

ಅಧಿಕಾರಿಗಳು ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳಿ

11:49 AM Apr 16, 2022 | Team Udayavani |

ದಾವಣಗೆರೆ: ಜಗಳೂರು ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಏ. 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಚಿಸಿದರು.

Advertisement

ಶುಕ್ರವಾರ ಜಗಳೂರು ತಾಲೂಕಿನ ಗುರುಸಿದ್ದಾಪುರ (ಮಡ್ರಳ್ಳಿ) ಗ್ರಾಮದ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು, ಜನಪ್ರತಿನಿಧಿಗಳು ಭಾಗವಹಿಸುವರು. ಕಾರ್ಯಕ್ರಮ ಬಹಳ ಅಚ್ಚುಕಟ್ಟಿನಿಂದ ಕೂಡಿರಬೇಕು ಎಂದರು.

ಮುಖ್ಯಮಂತ್ರಿಯವರು ಅಂದು ಪ್ರಮುಖವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ ಜಗಳೂರು ಭದ್ರಾ ಮೇಲ್ದಂಡೆ ಯೋಜನೆಯ 1255 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡುವರು. 26ಕೋಟಿ ರೂ. ವೆಚ್ಚದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯ ನಿವೇಶನಗಳ ಅಭಿವೃದ್ಧಿಗೆ ಶಂಕುಸ್ಥಾಪನೆ, ಮೂರು ಕೋಟಿ ರೂ. ವೆಚ್ಚದಲ್ಲಿ ನೂತನ ಪಟ್ಟಣ ಪಂಚಾಯಿತಿ ಕಟ್ಟಡದ ಲೋಕಾರ್ಪಣೆ, ಕೃಷಿ ಇಲಾಖೆಯ 5,340 ಹೆಕ್ಟೇರ್‌ ಭೂಮಿಗೆ ನೀರೊದಗಿಸುವ ಕೃಷಿ ಸಿಂಚಾಯಿ ಯೋಜನೆಯ ಜಲಾನಯನ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ, ಎರಡು ಕೋಟಿ ರೂ. ವೆಚ್ಚದ ವಿ.ಐ.ಪಿ ಅತಿಥಿ ಗೃಹ ಲೋಕಾರ್ಪಣೆ, ಅಣಬೂರು ಹಾಗೂ ಜಂಗಮ ತುಂಬಿಗೆರೆಯ ತಲಾ ಒಂದು ಕೋಟಿ ರೂ. ವೆಚ್ಚದ ಚೆಕ್‌ ಡ್ಯಾಂ ಸೇರಿದಂತೆ ಹಲವಾರು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.

ವಿವಿಧ ಇಲಾಖೆಗಳಿಂದ ಸವಲತ್ತುಗಳನ್ನು ಪಡೆದಿರುವ ಫಲಾನುಭವಿಗಳಿಗೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ 14 ಹಕ್ಕುಪತ್ರ, ರೇಷ್ಮೆ ಇಲಾಖೆಯಿಂದ ಮೂವರು ರೈತರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ, ಮೀನುಗಾರಿಕೆ ಇಲಾಖೆಯಿಂದ ಏಳು ಜನರಿಗೆ ಸಹಾಯಧನ ಸೌಲಭ್ಯ, ಕೋವಿಡ್‌ ಪರಿಹಾರ ಆದೇಶ ಪತ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ನೇರಸಾಲ ಸೌಲಭ್ಯ ಒದಗಿಸುವ ಆದೇಶ ಪತ್ರಗಳನ್ನು ವಿತರಿಸಲಾಗುವುದು ಎಂದರು.

ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌.ವಿ. ರಾಮಚಂದ್ರ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ.

Advertisement

ಅಂದು ಸುಮಾರು 20ಸಾವಿರ ಜನರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|ಎ. ಚನ್ನಪ್ಪ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ಜಗಳೂರು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next