ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪುರಸಭೆ, ಯಳಂದೂರು ಹಾಗೂ ಹನೂರು ಮತ್ತು ಪಟ್ಟಣ ಪಂಚಾಯಿತಿ ಚುನಾವಣೆಯು ಮುಕ್ತ, ನ್ಯಾಯಸಮ್ಮತ, ಪಾರದರ್ಶಕತೆಯಿಂದ ನಡೆಯಲು ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಕೆಲಸಗಳಿಗೆ ನಿಯುಕ್ತಿಗೊಂಡಿರುವ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಮತ್ತು ತಹಶೀಲ್ದಾರ್‌ಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀತಿ ಸಂಹಿತೆ ಜಾರಿ: ರಾಜ್ಯ ಚುನಾವಣಾ ಆಯೋಗವು ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಿಸಿದ್ದು, ಮೇ 2 ರಿಂದಲೇ ನೀತಿ ಸಂಹಿತೆ ಜಾರಿ ಮಾಡಿದೆ. ಈ ಅವಧಿಯಲ್ಲಿ ಯಾವುದೇ ಲೋಪದೋಷಗಳಿಗೆ ಅಸ್ಪದವಾಗದಂತೆ ಎಚ್ಚರ ವಹಿಸಬೇಕು. ಅಲ್ಲದೆ ಚುನಾವಣಾ ಕೆಲಸಗಳಿಗೆ ನೇಮಕವಾಗುವ ಅಧಿಕಾರಿ, ಸಿಬ್ಬಂದಿ ಆತ್ಮವಿಶ್ವಾಸದಿಂದ ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದರು.
ಗೊಂದಲಗಳಿಗೆ ಒಳಗಾಗಬೇಡಿ: ಗುಂಡ್ಲುಪೇಟೆ ಪುರಸಭೆ, ಯಳಂದೂರು ಹಾಗೂ ಹನೂರು ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ 9 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದ ಚುನಾವಣಾ ಪ್ರಕ್ರಿಯೆ ಮುಗಿಯುವ ವರೆಗೆ ಚುನಾವಣೆ ಸಂಬಂಧ ನೇಮಕವಾಗಿರುವ ಎಲ್ಲ ಅಧಿಕಾರಿಗಳು ಯಾವುದೇ ಗೊಂದಲಗಳಿಗೆ ಒಳಗಾಗದೇ ಕಾರ್ಯನಿರ್ವಹಣೆ ಮಾಡಬೇಕು. ಚುನಾವಣೆ ಕುರಿತು ಯಾವುದೇ ಅನುಮಾನಗಳಿದ್ದರೂ ನೇರವಾಗಿ ತಮ್ಮನ್ನೆ ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಹಗುರವಾಗಿ ಪರಿಗಣಿಸಬೇಡಿ: ಮತಗಟ್ಟೆಗಳ ಮೂಲಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿ ಸಿಬ್ಬಂದಿಗಳು ಚುನಾವಣಾ ಕೆಲಸ ಕಾರ್ಯಗಳನ್ನು ಹಗುರವಾಗಿ ಪರಿಗಣಿಸದೆ ಅತ್ಯಂತ ಹೊಣೆಗಾರಿಕೆ ಹಾಗೂ ಸಮನ್ವಯದಿದ ನಿಭಾಯಿಸಬೇಕು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಉಪವಿಭಾಗಾಧಿಕಾರಿ ನಿಖೀತಾ, ಗುಂಡ್ಲುಪೇಟೆ ಪುರಸಭೆ, ಯಳಂದೂರು, ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಶಿರಸ್ತೆದಾರರು ತರಬೇತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಕೃ.ಪ. ಗಣೇಶ್ ಅವರು ಪವರ್‌ಪಾಯಿಂಟ್ ಮೂಲಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸವಿವರವಾದ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.