ನವದೆಹಲಿ: 2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 17 ಶಾಸಕರ ಪೈಕಿ 10 ಮಂದಿ ಬಿಜೆಪಿಗೆ ಪಕ್ಷಾಂತರಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಗುರುವಾರ (ಮಾರ್ಚ್ 10) ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. 2022ರ ಗೋವಾ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಈ ನಿರ್ಧಾರ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕೃಷಿ ಕಾಯಕಕ್ಕಿಳಿದ ಫುಟ್ಬಾಲ್ ಆಟಗಾರ : ಅಂದು ಫುಟ್ಬಾಲ್ ಆಟಗಾರ ಇಂದು ಕಲ್ಲಂಗಡಿ ಬೆಳೆಗಾರ
ಚುನಾವಣೋತ್ತರ ಸಮೀಕ್ಷೆ ಪ್ರಕಾರ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದು ತಿಳಿಸಿತ್ತು. ಈ ಬಾರಿ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ(ಎಂಜಿಪಿ) ಕಿಂಗ್ ಮೇಕರ್ ಆಗಿ ಹೊರಹೊಮ್ಮಲಿದೆ.
2022ರ ಗೋವಾ ವಿಧಾನಸಭಾ ಚುನಾವಣೆಯ ಈವರೆಗಿನ ಮತಎಣಿಕೆಯಲ್ಲಿ ಬಿಜೆಪಿ 18, ಕಾಂಗ್ರೆಸ್ 12, ಎಂಜಿಪಿ 04, ಆಮ್ ಆದ್ಮಿ ಪಕ್ಷ 02 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
2017ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ, ಬಿಜೆಪಿ 13 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ 2019ರಲ್ಲಿ ಕಾಂಗ್ರೆಸ್ ನ 10 ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದರು. 3/2ರಷ್ಟು ಶಾಸಕರು ಬಿಜೆಪಿ ಜತೆ ವಿಲೀನಗೊಂಡಿರುವ ಪಕ್ಷದ 10 ಶಾಸಕರನ್ನು ಅನರ್ಹಗೊಳಿಸಬೇಕೆಂಬ ಕಾಂಗ್ರೆಸ್ ಬೇಡಿಕೆಯನ್ನು ಅಂದು ಸ್ಪೀಕರ್ ತಿರಸ್ಕರಿಸಿದ್ದರು.
ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಬೇಕೆಂಬ ಬೇಡಿಕೆಯನ್ನು ತಿರಸ್ಕರಿಸಿರುವ ಸ್ಪೀಕರ್ ನಿರ್ಧಾರವನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿತ್ತು. ಇದೀಗ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಗೋವಾದಲ್ಲಿ ಒಂದೆರಡು ದಿನಗಳಲ್ಲಿ ನೂತನ ಸರ್ಕಾರ ರಚನೆಯಾಗುವ ಸಾಧ್ಯತೆ ಇದ್ದು, ಈ ಅರ್ಜಿ ಯಾವುದೇ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ವರದಿ ವಿವರಿಸಿದ್ದು, 2022ರ ಚುನಾವಣೆಯಲ್ಲಿ ಗೆಲುವು ಸಾಧಿಸಲಿರುವ ಶಾಸಕರು ಪಕ್ಷಾಂತರ ಮಾಡದಿರಲು ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ ಎಂದು ವರದಿ ವಿಶ್ಲೇಷಿಸಿದೆ.