Advertisement

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

11:13 PM Sep 18, 2024 | Team Udayavani |

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಒಂದು ದೇಶ ಒಂದು ಚುನಾವಣೆ’ಯ ಪ್ರಸ್ತಾವವು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ಅನುಷ್ಠಾನಗೊಳಿಸಲು ಅಸಾಧ್ಯವಾದುದು’. ಇಂಥದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿಪಕ್ಷಗಳ ಜತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ಮೋದಿ ಸರಕಾರದ ದುಷ್ಟ ಉದ್ದೇಶವನ್ನು ಅನಾವರಣಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಒಂದು ಸರಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ ಎಂದಿದ್ದಾರೆ.
ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆ ಪಡುತ್ತಿದ್ದಾರೆ.

ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿ ಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ. ಈ ಬಗ್ಗೆ ಯೋಚನೆ ಮಾಡಲು ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು “ಒಂದು ದೇಶ ಒಂದು ಚುನಾವಣೆ’ ಎಂಬ ಗಿಮಿಕ್‌ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ವಾದವೇನು?
- ಲೋಕಸಭೆ ಇಲ್ಲವೆ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರ ಇಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಾಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ.
-ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾಕ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ, ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ.
- ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ.
- ಹೊಸ ಚುನಾವಣ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜತೆಗೆ ಸಂವಿಧಾನದ ಕನಿಷ್ಠ 5 ಪರಿಚ್ಛೇದಗಳಿಗೆ ತಿದ್ದುಪಡಿ ತರಬೇಕಾಗಿದೆ. ಈಗಿನ ವ್ಯವಸ್ಥೆಯಲ್ಲಿ ಸಂವಿಧಾನ ತಿದ್ದುಪಡಿಗೆ ಬೇಕಾದಷ್ಟು ಸದಸ್ಯರ ಸಂಖ್ಯೆಯನ್ನು ಹೊಂದಿಸಿಕೊಳ್ಳುವುದು ಎನ್‌ಡಿಎಗೆ ಕೂಡಾ ಕಷ್ಟ ಸಾಧ್ಯ.

Advertisement

Udayavani is now on Telegram. Click here to join our channel and stay updated with the latest news.

Next