ಬೆಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಕೊಂಬಾರು ಗ್ರಾಮದ ಮೆಟ್ಟುತ್ತಾರುವಿನಲ್ಲಿನ ಸೇತುವೆ ಹಾಗೂ ಕೂಡು ರಸ್ತೆ ನಿರ್ಮಾಣಕ್ಕೆ ರಾಜ್ಯ ಸರಕಾರ ಒಂದು ಕೋಟಿ ರೂ. ನೀಡಲು ಆಡಳಿತಾತ್ಮಕ ಒಪ್ಪಿಗೆ ನೀಡಿದೆ.
ಕೆಆರ್‌ಡಿಎಯ ಮೂಲಕ ಈ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು. ಕಾಮಗಾರಿ ಆರಂಭಿಸುವ ಮುಂಚಿತವಾಗಿ ಕಾಮಗಾರಿಯ ಆವಶ್ಯಕತೆ ಬಗ್ಗೆ ಪರಿಶೀಲನೆ ನಡೆಸಿ, ಅಭಿವೃದ್ಧಿಪಡಿಸಲು ಅರ್ಹವಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ನೀಡಲಾಗಿರುವ ಅನುದಾನದೊಳಗೆ ಕಾಮಗಾರಿ ಮುಕ್ತಾಯಗೊಳಿಸುಂತೆಯೇ ಟೆಂಡರ್ ನೀಡಬೇಕು ಮುಂತಾದ ಷರತ್ತುಗಳನ್ನು ಹೇರಿ ಸರಕಾರ ಯೋಜನೆಗೆ ಒಪ್ಪಿಗೆ ನೀಡಿದೆ. ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯ ಅನಂತರ ಸರಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದ ಬಳಿಕ ರಾಜ್ಯ ಸರಕಾರ ಈ ಆದೇಶ ನೀಡಿದೆ.
ನಿರ್ಮಾಣ ಕಾರ್ಯ ಆರಂಭಕ್ಕೂ ಹೈಕೋರ್ಟ್ ನಿರ್ದೇಶ ಮೆಟ್ಟುತ್ತಾರುವಿನಲ್ಲಿ ಸೇತುವೆ ಹಾಗೂ ಕೂಡು ರಸ್ತೆ ನಿರ್ಮಾಣ ಕಾರ್ಯವನ್ನು ಎರಡು ವಾರಗಳಲ್ಲಿ ಆರಂಭಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ನಿರ್ದೇಶಕರು ಪ್ರಮಾಣಪತ್ರ ಸಲ್ಲಿಸಿ, ಯೋಜನೆಯನ್ನು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ (ಕೆಆರ್‌ಆರ್‌ಡಿಎ) ಮೂಲಕ ಅನುಷ್ಠಾನಗೊಳಿಸಲು ರಾಜ್ಯ ಸರಕಾರ 1 ಕೋಟಿ ರೂ. ಬಿಡುಗಡೆ ಮಾಡಿ ಆದೇಶಿಸಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ಹೈಕೋರ್ಟ್, ಎರಡು ವಾರದ ಒಳಗೆ ಸೇತುವೆ, ರಸ್ತೆ ನಿರ್ಮಾಣ ಕಾರ್ಯ ಆರಂಭಿಸಿ ವರದಿ ನೀಡಬೇಕೆಂದು ನಿರ್ದೇಶಿಸಿ ವಿಚಾರಣೆಯನ್ನು ಮಾ. 14ಕ್ಕೆ ಮುಂದೂಡಿತು.
ಪ್ರಕರಣದ ಹಿಂದಿನ ವಿಚಾರಣೆ ವೇಳೆ ಯೋಜನೆಯ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರಕಾರದ ಪರ ವಕೀಲರಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಅದರಂತೆ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರು, ಯೋಜನೆಗೆ ಹಣ ಬಿಡುಗಡೆ ಮಾಡಿದ ಆದೇಶ ಪ್ರತಿಯನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದರು.