ರಾಯಚೂರು: ಕೋವಿಡ್ 19 ವೈರಸ್ ಕಾಟ ದಿನೇ ದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಯಚೂರು ಮತ್ತು ಸಿಂಧನೂರು ನಗರಗಳಲ್ಲಿ ಜುಲೈ 15 ರಿಂದ 22ನೇ ತಾರೀಖಿನವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ತಿಳಿಸಿದರು.
ನಗರದಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಯವರು, ರಾಯಚೂರು ಹಾಗೂ ಸಿಂಧನೂರುಗಳಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಪರಸ್ಪರ ಜನ ಸಂಪರ್ಕದಿಂದ ವೈರಸ್ ಹರಡುತ್ತಿದೆ, ಹೀಗಾಗಿ ಎರಡು ನಗರಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಯಾಗಲಿದೆ ಎಂದು ತಿಳಿಸಿದರು.
ಜಿಲ್ಲೆಯ ಉಳಿದ ಕಡೆಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಗಳವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಸಿಟಿ ಬಸ್‌ಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಬೇರೆ ಊರಿಗೆ ಹೋಗುವ ಬಸ್‌ಗಳಿಗೆ ನಿರ್ಬಂಧವಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಜನ ಹೊರ ಬರಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಮದುವೆ ಸಮಾರಂಭಗಳಲ್ಲಿ 20 ಜನರಿಗಿಂತ ಹೆಚ್ಚು ಜನ ಪಾಲ್ಗೊಳ್ಳಬಾರದು. ನಗರದಲ್ಲಿ ತೆರೆಯಲಾಗಿರುವ ಎಲ್ಲಾ ಕಲ್ಯಾಣ ಮಂಟಪಗಳನ್ನು ಪುನಃ ಮುಚ್ಚಲಾಗುವುದು. ಈ ಎರಡು ನಗರಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಬೇರೆ ಕಡೆಗಳಲ್ಲಿ ಮಧ್ಯಾಹ್ನದವರೆಗೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬಹುದು ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸರಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.