ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಿಸುವ ಕುರಿತು ಸ್ಪಷ್ಟ ನಿಲುವು ತಿಳಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಧೋರಣೆ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ವಿಚಾರವಾಗಿ ಒಂದು ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ದಾವಣಗೆರೆಯ ಡಿ.ಆರ್. ಶಾರದಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು, ಆನ್‌ಲೈನ್ ಗ್ಯಾಂಬ್ಲಿಂಗ್ ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ. ಅಂತಿಮ ನಿರ್ಧಾರ ಕೈಗೊಳ್ಳಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ನ್ಯಾಯಪೀಠ, ಆನ್‌ಲೈನ್ ಗ್ಯಾಂಬ್ಲಿಂಗ್ ಮತ್ತು ಬೆಟ್ಟಿಂಗ್ ನಿಷೇಧಿಸುವ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ. ಇಷ್ಟೊಂದು ಹಿಂಜರಿಕೆ ಯಾಕೆ? ಕಳೆದ ನಾಲ್ಕು ತಿಂಗಳಿಂದ ಸರ್ಕಾರ ಕಾಲಾವಕಾಶ ಕೇಳುತ್ತಲೇ ಇದೆ, ಈವರೆಗೆ ಯಾವುದೇ ನಿರ್ಧಾರ ಕೈಗೊಳ್ಳದ ಸರ್ಕಾರ ಈಗ ಮತ್ತೇ ಕಾಲಾವಕಾಶ ಕೇಳುತ್ತಿದೆ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿತು.
ಇದನ್ನೂ ಓದಿ :ಕಲಬುರಗಿ: ಹಾಡಹಗಲೇ ದುಷ್ಕರ್ಮಿಗಳಿಂದ ಮಾಜಿ MLC ಪುತ್ರನಿಗೆ ಸೇರಿದ 3.50 ಲಕ್ಷ ಹಣ ಲೂಟಿ
ಅಲ್ಲದೇ, ಅನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್ ನಿಷೇಧಿಸುವ ಸಂಬಂಧ ಸ್ಪಷ್ಟ ನಿಲುವು ತಿಳಿಸುವಂತೆ 2021ರ ಫೆ.16ರಂದು ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿತ್ತು. ಅಲ್ಲಿಂದ ಇಲ್ಲಿತನಕ ಸರ್ಕಾರದ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಸಚಿವ ಸಂಪುಟದ ನಿರ್ಣಯನ್ನು ನ್ಯಾಯಾಲಯದ ಮುಂದಿಟ್ಟಿಲ್ಲ. ಅರ್ಜಿಗೆ ಆಕ್ಷೇಪಣೆಗಳನ್ನೂ ಸಲ್ಲಿಸಿಲ್ಲ. ಸಾಕಷ್ಟು ಬಾರಿ ಹೇಳಿದರೂ, ನ್ಯಾಯಾಲಯದ ನಿರ್ದೇಶನಗಳ ಪಾಲನೆ ಮಾಡಿಲ್ಲ. ಆದ್ದರಿಂದ ಅಂತಿಮವಾಗಿ ಈ ಬಗ್ಗೆ ಮುಖ್ಯ ಕಾರ್ಯದರ್ಶಿಯವರು ಒಂದು ವಾರದಲ್ಲಿ ಪ್ರಮಾಣಪತ್ರ ಸಲ್ಲಿಸಿ ವಿವರಣೆ ನೀಡಬೇಕು ಎಂದು ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 8ಕ್ಕೆ ಮುಂದೂಡಿತು.