ಬೆಂಗಳೂರು: ಕೋವಿಡ್ 19 ಸಂದಿಗ್ಧತೆಯ ನಡುವೆಯೇ ಪದವಿ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಹಾಗೂ ತೃತೀಯ ವರ್ಷದ ಆನ್‌ಲೈನ್ ತರಗತಿಗಳು ಮಂಗಳವಾರದಿಂದ ಆರಂಭವಾಗಿವೆ.
ರಾಜ್ಯದ ಎಲ್ಲ ಪದವಿ ಕಾಲೇಜು ಗಳಲ್ಲೂ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಿದ್ದು, ಗ್ರಾಮೀಣ ಭಾಗದ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತರಗತಿಯ ವೀಡಿಯೋಗಳನ್ನು ಯೂಟ್ಯೂಬ್‌ನಲ್ಲಿ ಹಾಕಲಾಗಿದೆ.
ಅನೇಕ ಪ್ರಾಧ್ಯಾಪಕರು ವಿದ್ಯಾರ್ಥಿಗಳ ಮೊಬೈಲ್‌ಗೆ ಆನ್‌ಲೈನ್ ಲಿಂಕ್‌ಗಳನ್ನು ಕಳುಹಿಸಿದ್ದು ವಿದ್ಯಾರ್ಥಿಗಳು ಆನ್‌ಲೈನ್ ಅಥವಾ ಪೂರ್ವ ಮುದ್ರಿತ ವೀಡಿಯೋಗಳನ್ನು ನೋಡಿಕೊಳ್ಳಬಹುದಾದ ವ್ಯವಸ್ಥೆ ಮಾಡಿದ್ದಾರೆ.
ರಾಜ್ಯದ ಗ್ರಾಮೀಣ ಭಾಗದಲ್ಲಿ ನಿರೀಕ್ಷಿತ ಮಟ್ಟದಲ್ಲಿ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಯಲ್ಲಿ ಭಾಗವಹಿಸಿಲ್ಲ.
ಆಗಿಂದಾಗ್ಗೆ ನೆಟ್‌ವರ್ಕ್ ಸಮಸ್ಯೆ ಎದುರಾಗುತ್ತಿರುವು ದರಿಂದ ಆನ್‌ಲೈನ್ ತರಗತಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದರೆ ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ತರಗತಿ ನಡೆಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಕಾಲೇಜಿನ ಪ್ರಾಂಶುಪಾಲರೊಬ್ಬರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಆತಂಕ
ನೆಟ್‌ವರ್ಕ್, ಇಂಟರ್‌ನೆಟ್ ಮೊದಲಾದ ಸಮಸ್ಯೆಗಳ ಬಗ್ಗೆ ಆತಂಕಗೊಂಡಿರುವ ವಿದ್ಯಾರ್ಥಿಗಳು ಪ್ರಾಧ್ಯಾಪಕರ ಗಮನಕ್ಕೆ ತಂದಿದ್ದಾರೆ. ಇದಕ್ಕಾಗಿ ಕೆಲವು ಕಾಲೇಜುಗಳಲ್ಲಿ ಪ್ರಾಧ್ಯಾಪಕರು ವಾಟ್ಸ್‌ಆ್ಯಪ್ ಗ್ರೂಪ್ ರಚನೆ ಮಾಡಿ ತರಗತಿಯ ಆರಂಭ, ವಿಷಯಗಳ ಕುರಿತ ಮಾಹಿತಿಯನ್ನು ಅಪ್‌ಲೋಡ್ ಮಾಡುತ್ತಿದ್ದಾರೆ.