ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಸದ್ಯಕ್ಕೆ ಗೇಮಿಂಗ್ ಕಂಪೆನಿಗಳ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರಕಾರ ಹೇಳಿದೆ.
ಆನ್‌ಲೈನ್ ಗೇಮಿಂಗ್ ಮತ್ತು ಗ್ಯಾಂಬ್ಲಿಂಗ್ ನಿಷೇಧಕ್ಕೆ ಸಂಬಂಧಿಸಿ ಕರ್ನಾಟಕ ಪೊಲೀಸ್ ತಿದ್ದುಪಡಿ ಕಾಯ್ದೆ- 2021ರ ಸಿಂಧುತ್ವ ಪ್ರಶ್ನಿಸಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಹಾಗೂ ಇತರ ಕಂಪೆನಿಗಳು ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ಹಾಗೂ ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಸರಕಾರದ ಪರ ಹಾಜರಾದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಏಕಸದಸ್ಯ ನ್ಯಾಯಪೀಠದ ಮುಂದೆ ಒಂದು ಪ್ರಕರಣದಲ್ಲಿ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಇಲ್ಲೂ ಪರಿಗಣಿಸಬೇಕು. ಅರ್ಜಿದಾರರ ಎಲ್ಲ ವಾದಕ್ಕೆ ಉತ್ತರ ನೀಡಲಾಗುವುದು. ರಜಾ ದಿನಗಳಿಗೂ ಮೊದಲು ಏಕಸದಸ್ಯ ನ್ಯಾಯಪೀಠದ ಮುಂದೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂದು ಭರವಸೆ ನೀಡಲಾಗಿತ್ತು ಎಂದು ಹೇಳಿದರು.
ಇದನ್ನೂ ಓದಿ:ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಎರಡನೇ ಅತ್ಯಂತ ಪ್ರಭಾವಶಾಲಿ ವ್ಯಕ್ತಿ
ರಮ್ಮಿ ಫೆರೇಷನ್ ಪರ ವಾದ ಮಂಡಿಸಿದ ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ, ಸ್ಕಿಲ್ (ಕೌಶಲ) ಮತ್ತು ಚಾನ್ಸ್ (ಅವಕಾಶ) ಎರಡು ಬಗೆಯ ಆಟಗಳಿವೆ. ಕರ್ನಾಟಕ ಸರಕಾರ ಗೇಮ್‌ನಲ್ಲಿ ಸ್ಕಿಲ್ ಸೇರಿಸಿರುವುದು ಸುಪ್ರೀಂಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿದೆ. ರಾಜ್ಯ ಸರಕಾರಕ್ಕೆ ಆನ್‌ಲೈನ್ ಗೇಮಿಂಗ್ ಮತ್ತು ಆನ್‌ಲೈನ್ ಗ್ಯಾಂಬ್ಲಿಂಗ್ ನಿಷೇಧಿಸುವ ಅಧಿಕಾರ ಇಲ್ಲ. ರಾಜ್ಯ ಸರಕಾರ ಏಕಪಕ್ಷೀಯವಾಗಿ ಆದೇಶ ಹೊರಡಿಸಿರುವುದು ಸಂವಿಧಾನ ಬಾಹಿರವಾಗಿದೆ ಎಂದರು.