ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ ತೆರೆ ಬೀಳಲಿದ್ದು, ಮೂರು ಪಕ್ಷಗಳು ಮತದಾರರನ್ನು ಸೆಳೆಯಲು ಅಂತಿಮ ಹಂತದ ಕಸರತ್ತು ನಡೆಸಿವೆ.
ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ನಾಯಕರಲ್ಲೇ ಒಮ್ಮತದ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಸಹಮತ ಮೂಡದ ಕಾರಣ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಪರಸ್ಪರ ಎದುರಾಳಿಗಳಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲೂ ಕಾಂಗ್ರೆಸ್‌ನ ಮುನಿರತ್ನ, ಜೆಡಿಎಸ್‌ನ ರಾಮಚಂದ್ರ ಸ್ಪರ್ಧೆಯಿಂದ ಹಿಂದೆ ಸರಿಯಲು ಒಪ್ಪದ ಕಾರಣ ಒಮ್ಮತದ ಅಭ್ಯರ್ಥಿಯ ಸ್ಪರ್ಧೆ ವಿಚಾರ ಕಗ್ಗಂಟಾಗಿ ಉಳಿದಿತ್ತು. ಶುಕ್ರವಾರವೂ ಈ ಬಗ್ಗೆ ಉಭಯ ಪಕ್ಷಗಳ ನಾಯಕರ ಮಟ್ಟದಲ್ಲಿ ಮ್ಮತ ಮೂಡದ ಕಾರಣ ಮುನಿರತ್ನ, ರಾಮಚಂದ್ರ ಬಿರುಸಿನ ಪ್ರಚಾರ ನಡೆಸಿದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಅವರ ನಿವಾಸದಲ್ಲಿ ಶುಕ್ರವಾರ ಸಂಜೆ ಸಭೆ ನಡೆಸಿದರು. ಶಾಸಕರಾದ ಕೆ.ಗೋಪಾಲಯ್ಯ, ಸುರೇಶ್‌ಗೌಡ, ಟಿ.ಎ.ಶರವಣ ಇತರರು ಪಾಲ್ಗೊಂಡಿದ್ದರು.
ಸಭೆ ಬಳಿಕ ಮಾತನಾಡಿದ ಎಚ್.ಡಿ.ದೇವೇಗೌಡ, ಜಯನಗರ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಟ್ಟು ಆರ್.ಆರ್.ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಬೆಂಬಲಿಸುವ ವಿಚಾರಕ್ಕೆ ಸ್ಪಂದನೆ ಸಿಗಲಿಲ್ಲ. ಕ್ಷೇತ್ರದ ಕೆಲ ಕಾಂಗ್ರೆಸ್ ಸದಸ್ಯರು ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದಾರೆ. ಪಕ್ಷದ ಅಭ್ಯರ್ಥಿ ರಾಮಚಂದ್ರ ಗೆಲುವಿಗೆ ಶ್ರಮಿಸುತ್ತೇನೆ,’ ಎಂದು ಹೇಳಿದ್ದು, ಶನಿವಾರ ಕ್ಷೇತ್ರದಲ್ಲಿ ದೇವೇಗೌಡರು ಪ್ರಚಾರ ನಡೆಸುವ ಸಾಧ್ಯತೆ ಇದೆ.
ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆ ಗೊಂದಲದ ನಡುವೆ ಬಿಜೆಪಿಯ ತುಳಸಿ ಮುನಿರಾಜುಗೌಡ, ಮತದಾರರನ್ನು ಸೆಳೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಬಿಜೆಪಿಯ ಹಲವು ಶಾಸಕರು ಪಕ್ಷದ ಪರ ಪ್ರಚಾರ ನಡೆಸಿದ್ದಾರೆ. ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವುದರಿಂದ ಶನಿವಾರ ಮೂರೂ ಪಕ್ಷಗಳ ನಾಯಕ ದಂಡು ಕ್ಷೇತ್ರದಲ್ಲಿ ಪ್ರಚಾರಕ್ಕಿಳಿಯುವ ಸಾಧ್ಯತೆ ಇದೆ.