Advertisement

ಮುಕ್ತ ವಿವಿ ಅಕ್ರಮ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

06:24 AM Jun 04, 2019 | Team Udayavani |

ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆದ ಅಕ್ರಮ ನೇಮಕಾತಿ, ಅನುದಾನ ದುರ್ಬಳಕೆ, ವ್ಯಾಪಕ ಅವ್ಯವಹಾರ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇತರರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಸೋಮವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತಂತೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಶಿಕ್ಷಕರ ಸಂಘ (ರಿ) ಇದರ ಪ್ರಧಾನ ಕಾರ್ಯದರ್ಶಿ ಡಾ. ಜೆ. ಸಣ್ಣಪ್ಪ ಹಾಗೂ ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಸೋಮವಾರ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿರುವ ರಾಜಭವನದ ಕಾರ್ಯದರ್ಶಿ, ರಾಜ್ಯ ಸರ್ಕಾರ, ಮುಕ್ತ ವಿವಿಯ ಹಾಲಿ ಕುಲಪತಿ, ವಿಶ್ರಾಂತ ಕುಲಪತಿಗಳಾದ ಪ್ರೊ. ಕೆ.ಎಸ್‌. ರಂಗಪ್ಪ, ಪ್ರೊ. ಎಂ.ಜಿ ಕೃಷ್ಣನ್‌ ಸೇರಿ ಇತರರಿಗೆ ನೋಟಿಸ್‌ ಜಾರಿಗೊಳಿಸಿ ಆದೇಶಿಸಿತು. ಅಲ್ಲದೇ ಹಗರಣದ ತಪ್ಪಿತಸ್ಥರ ವಿರುದ್ಧ ಕೈಗೊಂಡಿರುವ ಕ್ರಮಗಳ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ, ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು 2017ರ ಜೂ.17ರಂದು ಹೊರಡಿಸಿದ ಕಡತದ ಸಂಪೂರ್ಣ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿ ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ನೀಡಿರುವ ಹಿಂಬರಹ ಕಾನೂನುಬಾಹಿರವಾಗಿದ್ದು, ಅದನ್ನು ರದ್ದುಗೊಳಿಸಬೇಕು.

ತಪ್ಪಿತಸ್ಥರ ವಿರುದ್ಧ ಎಫ್ಐಆರ್‌ ದಾಖಲಿಸಿ, ಕಾನೂನು ರೀತಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

ಪ್ರಕರಣವೇನು?: ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಅಕ್ರಮ ಕರ್ಮಕಾಂಡ ಬೆಳೆಕಿಗೆ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನ್ಯಾ. ಕೆ.ಎಸ್‌. ಭಕ್ತವತ್ಸಲ ಅವರ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಸಮಿತಿ ರಚಿಸಿ 2014ರಲ್ಲಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು.

ವಿಚಾರಣೆ ನಡೆಸಿದ ಸಮಿತಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಿತ್ತು. ಅದರಂತೆ ಕ್ರಮ ಜರುಗಿಸುವಂತೆ ರಾಜ್ಯಪಾಲರು ಸರ್ಕಾರಕ್ಕೆ ನಿರ್ದೇಶನ ನೀಡಿದ್ದರು. ಸರ್ಕಾರ ಕ್ರಮ ಕೈಗೊಳ್ಳದಿದ್ದಾಗ ಅರ್ಜಿದಾರರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಸಂಬಂಧಪಟ್ಟವರಿಗೆ ಮನವಿ ಸಲ್ಲಿಸುವಂತೆ ನಿರ್ದೇಶಿಸಿದ್ದ ಹೈಕೋರ್ಟ್‌ ರಿಟ್‌ ಅರ್ಜಿ ಇತ್ಯರ್ಥಪಡಿಸಿತ್ತು.

ಈ ಮಧ್ಯೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡು ಸರ್ಕಾರ ಸುಮ್ಮನಾಗಿ ಬಿಟ್ಟಿತ್ತು. ಈ ಬಗ್ಗೆ ಮನವಿ ಸಲ್ಲಿಸಿದರೆ, ಈಗಾಗಲೇ ತಪ್ಪಿತಸ್ಥರ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ ಎಂದಷ್ಟೇ ಹೇಳಿ ಸರ್ಕಾರ ಅರ್ಜಿದಾರರ ಮನವಿ ತಿರಸ್ಕರಿಸಿತ್ತು. ಇದೀಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವ ಮೂಲಕ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next