Advertisement

ಡಿಸೆಂಬರ್ ನಲ್ಲಿ ಶಾಲೆ ತೆರೆಯುವುದು ಸರಿಯಲ್ಲ: ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಶಿಫಾರಸು

11:53 AM Nov 23, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿಸೆಂಬರ್ ನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

Advertisement

ಭಾನುವಾರ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚರ್ಚೆಯಾಗಿದ್ದು, ಈ ಅಭಿಪ್ರಾಯಕ್ಕೆ ಬರಲಾಗಿದೆ.

ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ಮೇರೆಗೆ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆಸ್ಪತ್ರೆಗಳಲ್ಲೂ ಸೌಲಭ್ಯ ಹೆಚ್ಚಿಸಲಾಗಿದೆ. ಈಗ ಪ್ರತಿ ದಿನ ಸರಾಸರಿ 1,700 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ ದೆಹಲಿ, ಹರ್ಯಾಣ, ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಸೋಂಕು ಹರಡುವಿಕೆ ವೇಗ ಪಡೆದಿದೆ ಎಂದು ಚರ್ಚೆ ನಡೆಸಲಾಗಿದೆ.

ಚಳಿಗಾಲವೂ ಇರುವುದರಿಂದ ಕೋವಿಡ್ ಸೋಂಕು ಹರಡುವಿಕೆ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ತೀವ್ರವಾಗಿ ಬಾಧಿಸುತ್ತದೆ. ಸೆಪ್ಟೆಂಬರ್ ನಲ್ಲಿ ನಡೆದ ಸರ್ವೆ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ, ಡಿಸೆಂಬರ್ ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂದಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಪ್ರಾಯವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next