ಬೆಂಗಳೂರು: ಕೇಂದ್ರ ಸರಕಾರದ ವಿವಿಧ ಹುದ್ದೆಗಳಿಗೆ ಸಿಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ನಡೆಸುವ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇನ್ನು ಮುಂದೆ ಕನ್ನಡಿಗರು ತಮ್ಮ ಮಾತೃಭಾಷೆಯಲ್ಲೇ ಪರೀಕ್ಷೆ ಬರೆಯಬಹುದು.
ಹಿಂದಿ ಮತ್ತು ಇಂಗ್ಲಿಷ್ ಭಾಷೆಗೆ ಮಾತ್ರ ಸೀಮಿತವಾಗಿದ್ದ ಈ ಪರೀಕ್ಷೆಯಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಸಹಿತ ವಿವಿಧ 13 ಸ್ಥಳೀಯ ಮತ್ತು ಪ್ರಾದೇಶಿಕ ಭಾಷೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿನ ತಾಂತ್ರಿಕೇತರ ಸಿಬಂದಿಯ 10,880, ಕೇಂದ್ರ ಪರೋಕ್ಷ ತೆರಿಗೆ ಹಾಗೂ ಕಸ್ಟಂ ಮಂಡಳಿ (ಸಿಬಿಐಸಿ) ಮತ್ತು ಸೆಂಟ್ರಲ್ ಬ್ಯೂರೋ ಆಫ್ ನಾರ್ಕೋ ಟಿಕ್ಸ್ (ಸಿಬಿಎನ್)ನ ಸುಮಾರು 529 ಹವಾಲ್ದಾರ್ ಸೇರಿ ಒಟ್ಟು 11,409 ಹುದ್ದೆಗಳ ಭರ್ತಿಗೆ ಆಯೋಗ ಜ.18ರಂದು ಅಧಿಸೂಚನೆ ಹೊರಡಿಸಿದ್ದು, ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಉತ್ತರಿಸಲು ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದೆ. ಈ ಹುದ್ದೆಗಳಿಗೆ ಜ.18ರಿಂದ ಫೆ. 17ರ ವರೆಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಎಪ್ರಿಲ್‌ನಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿವೆ.