ವಿಧಾನಸಭೆ: ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಇಳಿಮುಖವಾಗಿದ್ದು, ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 14 ಸಾವಿರ ರೂ. ಬೆಂಬಲ ಬೆಲೆ ನಿಗದಿಪಡಿಸಬೇಕು. ಈ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಸರ್ವಪಕ್ಷ ನಿಯೋಗ ಕರೆದೊಯ್ಯಬೇಕು ಎಂದು ಪ್ರತಿಪಕ್ಷ ಸದಸ್ಯರು ಆಗ್ರಹಿಸಿದ್ದಾರೆ.
ಕೊಬ್ಬರಿ ಮತ್ತು ತೆಂಗಿನ ಕಾಯಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಜೆಡಿಎಸ್‌ನ ಚೆಲುವರಾಯಸ್ವಾಮಿ ಅವರ ಗಮನ ಸೆಳೆಯುವ ಸೂಚನೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು ನೀಡಿದ ಉತ್ತರದಿಂದ ಸಮಾಧಾನಗೊಳ್ಳದ ಪ್ರತಿಪಕ್ಷ ಸದಸ್ಯರು, ಈ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಚೆಲುವರಾಯಸ್ವಾಮಿ ಅವರೊಂದಿಗೆ ಜೆಡಿಎಸ್‌ನ ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ, ಬಿಜೆಪಿಯ ಸಿ.ಟಿ.ರವಿ ಮತ್ತಿತರರು ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಯಚಂದ್ರ ಅವರು, ಈ ಹಿಂದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 11,500 ರೂ. ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಕೋರಿತ್ತು.
ಆದರೆ, ಕೇಂದ್ರ ಸರ್ಕಾರ 6240 ರೂ. ಬೆಂಬಲ ಬೆಲೆ ನಿಗದಿಪಡಿಸಿದ್ದು, ಹೆಚ್ಚುವರಿಯಾಗಿ ಕ್ವಿಂಟಾಲ್‌ಗೆ ಒಂದು ಸಾವಿರ ರೂ. ಬೋನಸ್ ನೀಡುವುದಾಗಿ ರಾಜ್ಯ ಸರ್ಕಾರ ಪ್ರಕಟಿಸಿತ್ತು. ಆದರೆ, ಮಾರುಕಟ್ಟೆಯಲ್ಲಿ ಕೊಬ್ಬರಿ ದರ 6240 ರೂ.ಗಿಂತ ಹೆಚ್ಚಾಗಿದ್ದರಿಂದ ನಾಫೆಡ್ ಮೂಲಕ ಕೊಬ್ಬರಿ ಖರೀದಿ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಬೋನಸ್ ನೀಡಲೂ ಸಾಧ್ಯವಾಗಲಿಲ್ಲ ಎಂದರು.
ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳು ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಿದೆ. ಈ ಸಂದರ್ಭದಲ್ಲಿ ಬೆಂಬಲ ಬೆಲೆ ಮೊತ್ತ ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಲಿದೆ ಎಂದು ಭರವಸೆ ನೀಡಿದರು.