ಮೈಸೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.
ರದ್ದು ಪಡಿಸಲು ಆಗ್ರಹ: ಕೇಂದ್ರ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿದು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಿರುವುದು ಖಂಡನೀಯ. ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯದ ರೈತರಿಗೆ ಈಗಾಗಲೇ ಸಾಕಷ್ಟು ಅನ್ಯಾಯವಾಗಿದೆ. ಇದೀಗ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾದರೆ ಕಬಿನಿ, ಕೆಆರ್‌ಎಸ್, ಹಾರಂಗಿ ಮತ್ತು ಹೇಮಾವತಿ ಜಲಾಶಯಗಳ ಮೇಲೆ ಮಂಡಳಿ ಹಿಡಿತ ಸಾಧಿಸಲಿದೆ.
ಇದರಿಂದಾಗಿ ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ಕೂಡಲೇ ರದ್ದುಪಡಿಸಬೇಕೆಂದು ಆಗ್ರಹಿಸಿ ವಿವಿಧ ಘೋಷಣೆಗಳನ್ನು ಕೂಗಿದರು.
ಸುಪ್ರೀಂಕೋರ್ಟ್ ಆದೇಶ ಪಾಲನೆಗೆಂದು ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವ ಮೂಲಕ ಕೇಂದ್ರ ಸರ್ಕಾರ ರಾಜ್ಯದ ಹಕ್ಕನ್ನು ಕಿತ್ತುಕೊಂಡಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಬೇಕಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಮಂಡಳಿ ರದ್ದು ಪಡಿಸುವಂತೆ ಮಾಡುವ ಮೂಲಕ ರಾಜ್ಯದ ಜನರಿಗೆ ಅನ್ಯಾಯವಾಗದಂತೆ ತಡೆಯಬೇಕಿದೆ.
ಅಲ್ಲದೆ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ರದ್ದು ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಪ್ರತಿಭಟನೆಯಲ್ಲಿ ಸೇನಾಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್‌ಗೌಡ ಇನ್ನಿತರರು ಪಾಲ್ಗೊಂಡಿದ್ದರು.