Advertisement

ಪ್ರತ್ಯೇಕ ಧರ್ಮಕ್ಕೆ ಹಿರಿಯ ಸಚಿವರಿಂದಲೂ ವಿರೋಧ

08:15 AM Mar 10, 2018 | Team Udayavani |

ಬೆಂಗಳೂರು: ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆ ನೀಡುವ ಕುರಿತು ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದಿಗಟಛಿತೆಗೆ ಸಿಲುಕಿಕೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇವಲ ಲಿಂಗಾಯತ ಸಚಿವರಷ್ಟೇ ಅಲ್ಲದೇ ಬೇರೆ ಸಮುದಾಯದ ಹಿರಿಯ ಸಚಿವರೂ ಸರ್ಕಾರದ ನಡೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.

Advertisement

ವೀರಶೈವ- ಲಿಂಗಾಯತ ಸಮುದಾಯಕ್ಕೆ ಜಾತಿ ಆಧಾರದಲ್ಲಿ ರಾಜ್ಯ ಸರ್ಕಾರವೇ ಅಲ್ಪ ಸಂಖ್ಯಾತ ಆಯೋಗದ ಮೂಲಕ ಅಲ್ಪ
ಸಂಖ್ಯಾತರ ಮಾನ್ಯತೆ ನೀಡಲು ಅವಕಾಶವಿದೆ. ಅದರಂತೆ ರಾಜ್ಯ ಸರ್ಕಾರ ಮೊದಲು ಅಲ್ಪ ಸಂಖ್ಯಾತರ ಮಾನ್ಯತೆ ನೀಡಿ, ನಂತರ ಕೇಂದ್ರ ಸರ್ಕಾರಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆಗೆ ಶಿಫಾರಸು ಮಾಡಬೇಕೆಂದು ಪೌರಾಡಳಿತ ಸಚಿವ ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ
ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಬಹು ಸಂಖ್ಯಾತರಾಗಿರುವ ಹಾಗೂ ಆರ್ಥಿಕವಾಗಿ ಸಬಲರಾಗಿರುವ ಲಿಂಗಾಯತರಿಗೆ ಅಲ್ಪ
ಸಂಖ್ಯಾತರ ಮಾನ್ಯತೆ ನೀಡುವುದರಿಂದ ಈಗಿರುವ ಅಲ್ಪ ಸಂಖ್ಯಾತ ಸಮುದಾಯಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಈ ಪ್ರಯತ್ನ ಬೇಕಿರಲಿಲ್ಲ ಎಂದು ಹಿರಿಯ ಸಚಿವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆ ನೀಡುವುದರಿಂದ ಕಾಂಗ್ರೆಸ್‌ ನೆಚ್ಚಿಕೊಂಡಿರುವ ಮುಸ್ಲಿಂ ಸಮುದಾಯದ ವಿರೋಧ
ಕಟ್ಟಿಕೊಳ್ಳಬೇಕಾಗುತ್ತದೆ ಎಂಬ ಸೂಕ್ಷ್ಮವನ್ನು ಕೆಲವು ಸಚಿವರು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

ಮೊದಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಎಂ.ಬಿ. ಪಾಟೀಲ್‌ ಸೇರಿ ಕೆಲವು ಲಿಂಗಾಯತ ಸಚಿವರು ಪಟ್ಟು ಹಿಡಿದಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಸಂದರ್ಭದಲ್ಲಿಯೇ ಅಡ್ವೊಕೇಟ್‌ ಜನರಲ್‌ ಅವರನ್ನೂ ಸಭೆಗೆ ಕರೆಯಿಸಿ, ಮಾಹಿತಿ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಬಹು ಸಂಖ್ಯಾತರಾಗಿರುವ ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತ ಮಾನ್ಯತೆ ನೀಡುವುದು ಕಷ್ಟ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ವಿಷಯವನ್ನು ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next