ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 9ರಿಂದ 11ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಾಬುಲ್ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಬಂಗಾಳ ಉಪಸಾಗರದಲ್ಲಿ ಜುಲೈ 11ರಂದು ವಾಯುಭಾರ ಕುಸಿತವಾಗುವ ಹೆಚ್ಚಿನ ಸಾಧ್ಯತೆ ಇದೆ. ಈ ಪ್ರಭಾವದಿಂದ ಜುಲೈ 8ರಿಂದ 11ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗಿನಿಂದ ಕೂಡಿದ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಜುಲೈ 8 ಹಾಗೂ 9ರಂದು ರಾಜ್ಯಾದ್ಯಂತ ಮಳೆ ವಿಂಗಡಣೆ ಹಾಗೂ ತೀವ್ರತೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜುಲೈ 8ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಜುಲೈ 8ರಂದು ಸಾಧಾರಣದಿಂದ ಭಾರಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜುಲೈ 8 ಮತ್ತು 9 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇನ್ಮುಂದೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ಸಹಜ ಸ್ಥಿತಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ದುರ್ಬಲವಾಗಿತ್ತು. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಬುಧವಾರ ಬಹುತೇಕ ಎಲ್ಲ ಸ್ಥಳಗಳಲ್ಲಿ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ, ಯಾದಗಿರಿಯ ಸೈದಾಪುರ, ವಿಜಯನಗರದ ಇಂಡಿ, ಬಳ್ಳಾರಿಯ ಹಡಗಲಿಯಲ್ಲಿ 7 ಸೆಂ.ಮೀ., ಕೋಲಾರದಲ್ಲಿ 6 ಸೆಂ.ಮೀ., ಚಿತ್ರದುರ್ಗದ ಶ್ರೀರಾಮಪುರ, ಬಳ್ಳಾರಿಯ ಕಂಪ್ಲಿ, ಬೀದರ್‌ನಲ್ಲಿ 4 ಸೆಂ.ಮೀ., ಗದಗದ ನರಗುಂದದಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದು ತಿಳಿಸಿದ್ದಾರೆ.