ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಜುಲೈ 8ರಿಂದ 11ರವರೆಗೆ ಹಾಗೂ ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ ಕೊಡಗು ಹಾಗೂ ಶಿವಮೊಗ್ಗದಲ್ಲಿ ಜುಲೈ 8ರಿಂದ 10ರವರೆಗೆ 115ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ ಮತ್ತು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಜುಲೈ 9ರಿಂದ 12ರವರೆಗೆ “ಹಳದಿ’ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿಯ ಕೊಲ್ಲೂರಿನಲ್ಲಿ ಅತಿ ಹೆಚ್ಚು 20 ಸೆಂ.ಮೀ. ಮಳೆ ಬಿದ್ದಿದೆ. ಉಳಿದಂತೆ ಮಂಕಿಯಲ್ಲಿ 17 ಸೆಂ.ಮೀ., ಕೋಟಾದಲ್ಲಿ 17, ಕಾರ್ಕಳ 13 ಮಳೆಯಾಗಿರುವುದು ವರದಿಯಾಗಿದೆ. ಪುತ್ತೂರು 12, ಕುಂದಾಪುರ 10, ಸಿದ್ದಾಪುರದಲ್ಲಿ 10 ಸೆಂ.ಮೀ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ಐದು ದಿನ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಈ ಮಧ್ಯೆ ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬೀಸುತ್ತಿರುವುದರಿಂದ ಜುಲೈ 8, 9 ಹಾಗೂ 10ರಂದು ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.