ನವದೆಹಲಿ: ದೇಹದ ಅಂಗಾಂಗಗಳನ್ನು ದಾನ ಮಾಡಲು ಆಸಕ್ತಿ ಹೊಂದಿರುವವರು ಯಾವುದೇ ರಾಜ್ಯಗಳಲ್ಲಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಇದೆ. ಅದಕ್ಕಾಗಿ ನಿಗದಿತ ರಾಜ್ಯದ ವಾಸಸ್ಥಳದ ದೃಢೀಕರಣ ನೀಡುವ ಅಗತ್ಯ ಇಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.
ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವೆ ಭಾರತಿ ಪ್ರವೀಣ್ ಪವಾರ್, ಅಂಗಾಂಗಗಳನ್ನು ದಾನ ಮಾಡುವ ನಿಟ್ಟಿನಲ್ಲಿ ಸರ್ಕಾರ “ಒಂದು ದೇಶ; ಒಂದು ನೀತಿ’ ಅನುಸರಿಸಲು ಮುಂದಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರಗಳ ಜತೆಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಅದಕ್ಕೆ ಪೂರಕವೆಂಬಂತೆ ಅಂಗಾಂಗಗಳನ್ನು ದಾನ ಮಾಡುವ ಆಸಕ್ತಿ ಇರುವವರಿಗೆ ಯಾವುದೇ ರಾಜ್ಯಗಳಲ್ಲಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಈ ನಿಟ್ಟಿನಲ್ಲಿ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ನೀಡಬೇಕು ಎಂಬ ನಿಯಮ ಕೂಡ ರದ್ದು ಮಾಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.