ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮಾಡಿ, ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ, ಮತ್ತೂಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಕಾರ್ಯಕರ್ತರು ಮತ್ತು ಮುಖಂಡರು ಶ್ರಮಿಸಬೇಕು ಎಂದು ಕೆಪಿಸಿಸಿ ಸದಸ್ಯ ವಿನಯ್.ಎನ್ ಶ್ಯಾಮ್ ಹೇಳಿದರು.
ನಗರದ ಸಿಎಸ್‌ಐ ಚರ್ಚ್‌ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಕಾಂಗ್ರೆಸ್ ಪಕ್ಷದ ಭದ್ರ ಕೋಟೆಯಾಗಿದ್ದು, ಮುಂದಿನ ದಿನಗಳಲ್ಲಿ ಸಹ ಅವಳಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಮಾಜಿ ಸಿಎಂ ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಸದಸ್ಯತ್ವ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲಾಗುವುದು ಎಂದರು.
ನಿಷ್ಠಾವಂತರಿಗೆ ಪ್ರಮುಖ ಜವಾಬ್ದಾರಿ: ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸುವ ಕಾರ್ಯಕರ್ತರಿಗೆ ಪಕ್ಷದ ಅಧ್ಯಕ್ಷರು ಪ್ರಮುಖ ಜವಾಬ್ದಾರಿ ನೀಡುವ ಮೂಲಕ ಸಂಘಟನೆಯಲ್ಲಿ ಅವರನ್ನು ತೊಡಗಿಸಿಕೊಳ್ಳುವ ಜೊತೆಗೆ ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಅವರಿಗೆ ವಿವಿಧ ನಿಗಮ ಮತ್ತು ಮಂಡಳಿಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಲಾಗುತ್ತದೆ. ಕಾಂಗ್ರೆಸ್ ಕಾರ್ಯಕರ್ತರು ಈ ಹಿಂದೆ ಕೇಂದ್ರದಲ್ಲಿ ಅಧಿಕಾರ ನಡೆಸಿದ ಯುಪಿಎ ಸರ್ಕಾರ ಮತ್ತು ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಜಾರಿಗೊಳಿಸಿದ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕಾಗಿದೆ ಎಂದರು.
ವೀಕ್ಷಕ, ಸಂಯೋಜಕರ ನೇಮಕ: ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಲು ವಿಶೇಷವಾಗಿ ಸದಸ್ಯತ್ವ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಪಿಸಿಸಿ ಅಧ್ಯಕ್ಷರು ಪಕ್ಷದ ವೀಕ್ಷಕರನ್ನು ಮತ್ತು ಸಂಯೋಜಕರನ್ನು ನೇಮಕ ಮಾಡಿದ್ದಾರೆ. ಅವರ ಸಲಹೆ, ಸೂಚನೆಗಳನ್ನು ಪಾಲಿಸಿ ಜಿಲ್ಲೆಯ ಪ್ರತಿಯೊಂದು ಹೋಬಳಿ, ಗ್ರಾಪಂ, ಮತಗಟ್ಟೆವಾರು ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಸಿಎಸ್‌ಐ ಚರ್ಚ್‌ನ ಫಾದರ್ ಸೋಲೋಮನ್ ಪಾಲ್ ಜೆ ಅವರೊಂದಿಗೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ನಗರಸಭಾ ಸದಸ್ಯ ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.