Advertisement

ಕಾಂಗ್ರೆಸ್‌ ಹಿರಿಯ ನಾಯಕ ಆಸ್ಕರ್‌ ಫೆರ್ನಾಂಡಿಸ್‌ ಆಸ್ಪತ್ರೆಗೆ ದಾಖಲು

01:59 AM Jul 21, 2021 | Team Udayavani |

ಮಂಗಳೂರು : ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಅವರು ಅಸ್ವಸ್ಥರಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಮಂಗಳೂರಿನ ತಮ್ಮ ನಿವಾಸದಲ್ಲಿ ಎರಡು ದಿನಗಳ ಹಿಂದೆ ಬೆಳಗ್ಗೆ ಯೋಗ ಮಾಡುವ ವೇಳೆ ಆಸ್ಕರ್‌ ಫೆರ್ನಾಂಡಿಸ್‌ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದು, ತಲೆಗೆ ಏಟಾಗಿತ್ತು. ಆದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲ ಎಂದು ಭಾವಿಸಿ ತತ್‌ಕ್ಷಣ ಚಿಕಿತ್ಸೆ ಪಡೆದುಕೊಂಡಿರಲಿಲ್ಲ. ಆ ನಂತರದಲ್ಲಿ ಮಾಮೂಲಿ ಆರೋಗ್ಯ ತಪಾಸಣೆಗೆಂದು ಅವರು ನಗರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ತಲೆಯ ಒಳಭಾಗಕ್ಕೆ ಏಟು ಬಿದ್ದು, ಆಂತರಿಕ ರಕ್ತಸ್ರಾವ ಆಗಿರುವುದು ಕಂಡುಬಂತು.

ಆರೋಗ್ಯದಲ್ಲೂ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಆ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಆರಂಭಿಸಲಾಯಿತು. ವೈದ್ಯರು ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಿದ್ದು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಕರ್‌ ಅವರ ಆಪ್ತರು ಹೇಳಿದ್ದಾರೆ.

ಆರೋಗ್ಯ ವಿಚಾರಿಸಿದ ಸೋನಿಯಾ, ರಾಹುಲ್‌
ಆಸ್ಕರ್‌ ಅವರು ಅಸ್ವಸ್ಥರಾಗಿರುವ ಮಾಹಿತಿ ತಿಳಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಆಸ್ಕರ್‌ ಅವರ ಪತ್ನಿ ಬ್ಲೋಸಂ ಫೆರ್ನಾಂಡಿಸ್‌ ಅವರಿಗೆ ಹೊಸದಿಲ್ಲಿಯಿಂದ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಶಾಸಕ ಯು.ಟಿ. ಖಾದರ್‌, ಮಾಜಿ ಸಚಿವ ರಮಾನಾಥ ರೈ, ಪ್ರಮೋದ್‌ ಮಧ್ವರಾಜ್‌, ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ. ಹರೀಶ್‌ ಕುಮಾರ್‌, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆಶೋಕ್‌ ಕೊಡವೂರು, ಮಾಜಿ ಶಾಸಕ ಜೆ.ಆರ್‌. ಲೋಬೋ, ಮೊದಿನ್‌ ಬಾವಾ ಸೇರಿದಂತೆ ಕಾಂಗ್ರೆಸ್‌ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next