Advertisement

ಬಿಜೆಪಿ ಸೇರಲು ಅನ್ಯ ಪಕ್ಷದವರ ಕಾತರ

11:44 AM Aug 28, 2017 | |

ಬೆಂಗಳೂರು: ಮುಂದಿನ ದಿನಗಳಲ್ಲಿ ಎಲ್ಲರೂ ಅಚ್ಚರಿ ಪಡುವ ರೀತಿಯಲ್ಲಿ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 

Advertisement

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ವರಪ್ರಸಾದ ರೆಡ್ಡಿ ಹಾಗೂ ಅವರ ಬೆಂಬಲಿಗರು, ನಿವೃತ್ತ ಪೊಲೀಸ್‌ ಉಪ ಆಯುಕ್ತ ಧರ್ಮಯ್ಯ ಮತ್ತು ನಿವೃತ್ತ ಹಣಕಾಸು ಅಧಿಕಾರಿ ಎಂ.ಪಿ.ನಾರಾಯಣಸ್ವಾಮಿ ಮತ್ತಿರರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದರು.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಭ್ರಷ್ಟ ಕಾಂಗ್ರೆಸ್‌ ಸರ್ಕಾರದಿಂದ ಬೇಸತ್ತು ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ಗಮನಿಸಿ ಪಕ್ಷಕ್ಕೆ ಸೇರಲು ಮುಖಂಡರ ದೊಡ್ಡ ಸಾಲೇ ನಿಂತಿದೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ ಅಚ್ಚರಿಯಾಗುವ ರೀತಿಯಲ್ಲಿ ಅನೇಕ ಹಿರಿಯ ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದರು.

ಟಿಕೆಟ್‌ಗೆ ಆಸೆಪಡಬೇಡಿ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನಗಳನ್ನು ಗೆಲ್ಲಿಸಿಕೊಡುವ ಮೂಲಕ ರಾಜ್ಯದ ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೂಗೆಯಲು ಎಲ್ಲರೂ ಸಹಕರಿಸಬೇಕು. ಆ ನಿಟ್ಟಿನಲ್ಲಿ ಪಕ್ಷಕ್ಕೆ ಬರುವವರಿಗೆ ಸ್ವಾಗತವಿದೆ. ಚುನಾವಣೆ ವೇಳೆ ಕ್ಷೇತ್ರದಲ್ಲಿ ಯಾರ ಪರ ಜನರ ಒಲವಿದೆಯೋ ಅಂಥವರಿಗೆ ಪಕ್ಷದ ಟಿಕೆಟ್‌ ನೀಡಲಾಗುತ್ತದೆ. ಆದ್ದರಿಂದ ಪಕ್ಷಕ್ಕೆ ಹೊಸದಾಗಿ ಸೇರಿದವರು ಟಿಕೆಟ್‌ಗೆ ಆಸೆ ಪಡದೆ ಯಾರು ಕಣಕ್ಕಿಳಿಯುತ್ತಾರೋ ಅವರನ್ನು ಗೆಲ್ಲಿಸಲು ಪ್ರಯತ್ನ ಮಾಡಬೇಕು ಎಂದರು.

ರೈತರಿಗೆ ಸ್ಪಂದಿಸದ ಸರ್ಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿ ಕಾರಿದ ಯಡಿಯೂರಪ್ಪ, ಈ ಸರ್ಕಾರ ರಾಜ್ಯದ ಖಜಾನೆ ಲೂಟಿ ಮೂಲಕ ಹಗಲು ದರೋಡೆ ಮಾಡುತ್ತಿದೆ. ಬಿಬಿಎಂಪಿಯಲ್ಲಿ ಹಗರಣಗಳ ಸರಮಾಲೆಯೇ ಇದೆ. ಭೀಕರ ಬರಗಾಲದಿಂದ ರೈತರು ಕಂಗಾಲಾಗಿದ್ದರೂ ರೈತರಿಗೆ ಸ್ಪಂದಿಸುತ್ತಿಲ್ಲ. ಆದ್ದರಿಂದ ಬಿಜೆಪಿ ವತಿಯಿಂದ ಬರದಿಂದ ಕಂಗೆಟ್ಟಿರುವ ರೈತರಿಗೆ ಸ್ಪಂದಿಸುವ ಜತೆಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

Advertisement

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್‌, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಗೋವಿಂದ ಕಾರಜೋಳ, ಸಿ.ಟಿ.ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಮಾಜಿ ಸಚಿವ ಸಿ.ಎಂ.ಉದಾಸಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next