ಚಾಮರಾಜನಗರ: ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕುಗಳನ್ನು ಅನುಭವಿಸುವ ಜೊತೆಗೆ ಕರ್ತವ್ಯಗಳನ್ನು ನಿರ್ವಹಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದಿಂದ ಸೋಮ ವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 1949ರ ನ.26 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ದೇಶದ ಸಂವಿಧಾನವು ಅತಿ ದೊಡ್ಡ ಸಂವಿಧಾನವಾಗಿದೆ. ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳಲು ಸಂವಿಧಾನ ದಿನವನ್ನು ಆಚರಿಸಲಾ ಗುತ್ತಿದೆ. ಕೇವಲ ಹಕ್ಕುಗಳನ್ನು ಚಲಾಯಿಸುವುದಲ್ಲ. ದೇಶಕ್ಕಾಗಿ ಕೆಲವು ಕರ್ತವ್ಯಗಳನ್ನು ಮಾಡಬೇಕಾಗುತ್ತದೆ. ಕಾನೂನು ಅರಿವು ಅಂದರೆ ಸಂವಿಧಾನದ ಅರಿವು ಆಗಿದೆ. ಇದನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕರ್ತವ್ಯಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಿ: ವಕೀಲ ಅರುಣ್ ಕುಮಾರ್ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಗಾಂಧೀಜಿ ಅವರು ಬಾಹ್ಯವಾಗಿ ಹೋರಾಟ ಮಾಡಿದರು. ಆದರೆ, ಅಂಬೇಡ್ಕರ್ ಅವರು ಆಂತರಿಕವಾಗಿ ದೇಶದ ಪ್ರಜೆಗಳ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಮೂಲ ಭೂತ ಹಕ್ಕುಗಳು, ಕರ್ತವ್ಯಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು. ಸಂವಿಧಾನ ಅಂಗೀಕಾರವಾಗಿ 73 ವರ್ಷಗಳಾದರೂ ಕೂಡ ನ್ಯಾಯಾಲಯದಲ್ಲಿ ಯಾವುದೇ ರೀತಿಯ ರಿಟ್ ಅರ್ಜಿಯನ್ನು ಸಂವಿಧಾ ನದ ವಿರುದ್ಧ ಸಲ್ಲಿಸಿಲ್ಲ. ಇದು ನಮ್ಮ ಸಂವಿಧಾನದ ಹೆಮ್ಮೆಯ ವಿಚಾರ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ಸಂವಿ ಧಾನವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಸಮಾನತೆಯನ್ನು ಕಾಣಲು ಸಾಧ್ಯ. ಹಿಂದೆ ಸಂವಿಧಾನ ದಿನಾಚರಣೆಯನ್ನು ಕಾನೂನು ದಿನ ಎಂದು ಆಚರಿಸಲಾಗುತ್ತಿತ್ತು. ಆದರೆ, 2015ರಿಂದ ನ.26 ರಂದು ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ದೇಶದ ಶೇ.40 ರಷ್ಟು ಜನರಿಗೆ ಸಂವಿಧಾನದ ಅರಿವೇ ಇಲ್ಲ. ಎಲ್ಲರೂ ಸಂವಿಧಾನವನ್ನು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀರಾದ ನಿಶಾರಾಣಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಎಸ್.ಹೊನ್ನಸ್ವಾಮಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್, ನ್ಯಾಯಾಧೀಶರಾದ ವೆಂಕಟೇಶ್, ನಿವೇದಿತಾ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಸ್ವಾಮಿ, ಜಿಲ್ಲಾ ಸರ್ಕಾರಿ ಅಭಿಯೋಜಕ ರಘುಕುಮಾರ್, ವಿಶೇಷ ಸರ್ಕಾರಿ ಅಭಿಯೋಜಕ ಯೋಗೇಶ್ ಸೇರಿದಂತೆ ಇತರರಿದ್ದರು.