ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ತಮ್ಮ ಪಕ್ಷಕ್ಕೆ ಅಧಿಕಾರದಲ್ಲಿ ಮಾನ್ಯತೆ ದೊರೆಯುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ಪಕ್ಷದ ನಾಯಕರ ವಿರುದ್ದವೇ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಸಿಎಂ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಸಂಪುಟದಲ್ಲಿ ಸ್ಥಾನ ಸಿಗದೆ ಬೇಸರಗೊಂಡಿರುವ ಅತೃಪ್ತ ಕಾಂಗ್ರೆಸ್ ಶಾಸಕರು ಶಾಸಕಾಂಗ ಪಕ್ಷದ ಸಭೆಯಿಂದಲೂ ದೂರ ಉಳಿಯುವ ಮೂಲಕ ತಮ್ಮ ಬಂಡಾಯ ಮುಂದುವರಿಸಿದ್ದು, ಇದರಿಂದ ಸಮ್ಮಿಶ್ರ ಸರ್ಕಾರದಲ್ಲಿ ಮಿತ್ರಪಕ್ಷ ಕಾಂಗ್ರೆಸ್ ತೀವ್ರ ಮುಜುಗರ ಅನುಭವಿಸುವಂತಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಸಮ್ಮಿಶ್ರ ಸರ್ಕಾರದಲ್ಲಿ ತಮಗೆ ಯಾವುದೇ ರೀತಿಯ ಮಾನ್ಯತೆ ದೊರೆಯುತ್ತಿಲ್ಲ. ಕಾಂಗ್ರೆಸ್ ಶಾಸಕರ ಪತ್ರಗಳಿಗೆ ಸಿಎಂ ಕುಮಾರಸ್ವಾಮಿ ಸ್ಪಂದಿಸುತ್ತಿಲ್ಲ. ನಮ್ಮ ಕ್ಷೇತ್ರಗಳಲ್ಲಿ ಪರಾಭವಗೊಂಡಿರುವ ಜೆಡಿಎಸ್ ಅಭ್ಯರ್ಥಿಗಳುಮುಖ್ಯಮಂತ್ರಿ ಬಳಿ ಬಂದು ಕೆಲಸ ಮಾಡಿಸಿಕೊಂಡು ಹೋಗುತ್ತಿದ್ದಾರೆ ಎಂದು ಹಲವು ಶಾಸಕರು ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಜೆಡಿಎಸ್ ಸಚಿವರು ಕೂಡ ಕಾಂಗ್ರೆಸ್ ಶಾಸಕರಿಗೆ ಬೆಲೆ ಕೊಡುತ್ತಿಲ್ಲ. ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆಯಬೇಕೆಂದರೆ ಎರಡೂ ಪಕ್ಷದ ಶಾಸಕರಿಗೆ ಸಮಾನ ಗೌರವ ಕೊಡುವ ಕೆಲಸವಾಗಬೇಕು ಎಂದು ಮನವಿ ಮಾಡಿದ್ದಾರೆ.
ಲೋಕಸಭೆಗೂ ಮೈತ್ರಿ ಬೇಡ: ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್ ಸ್ವತಂತ್ರವಾಗಿ ಎದುರಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವುದರಿಂದ ಜೆಡಿಎಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವುದಕ್ಕೂ ಕೆಲವು ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪರಿಷತ್ ಸಭಾಪತಿ ಸ್ಥಾನಕ್ಕೆ ಪಟ್ಟು: ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಕ್ಕೂ ವಿಧಾನ ಪರಿಷತ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಂಪುಟ ವಿಸ್ತರಣೆಗೆ ಆಗ್ರಹ: ಕಾಂಗ್ರೆಸ್‌ನಲ್ಲಿ ಖಾಲಿ ಇರುವ 6 ಸಚಿವ ಸ್ಥಾನಗಳನ್ನು ಶೀಘ್ರವೇ ಭರ್ತಿ ಮಾಡುವಂತೆ
ಶಾಸಕರು ನಾಯಕರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅತೃಪ್ತರು ಗೈರು
ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಅತೃಪ್ತರಾಗಿರುವ ಎಂ.ಬಿ. ಪಾಟೀಲ್,ಸತೀಶ್ ಜಾರಕಿಹೊಳಿ,ಎಂ.ಟಿ.ಬಿ ನಾಗರಾಜ್, ರಾಮಲಿಂಗಾರೆಡ್ಡಿ, ಎಂ. ಕೃಷ್ಣಪ್ಪ, ಡಾ.ಸುಧಾಕರ್ ಸಭೆಗೆ ಗೈರಾಗಿದ್ದರು.