ಬೆಂಗಳೂರು: “ನೀಟ್ ತೇರ್ಗಡೆಯಾದ ಹೊರ ರಾಜ್ಯದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೈದ್ಯಕೀಯ ಸೀಟಿಗೆ ನೋಂದಾಣಿ ಮಾಡಿಕೊಳ್ಳಲು ಅವಕಾಶ ನೀಡಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಇದರ ವಿರುದ್ಧ ಜು.13ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ,’ ಎಂದು ರಾಜ್ಯದ ವಿದ್ಯಾರ್ಥಿಗಳ ಪಾಲಕರು ಹೇಳಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿಯ ಪಾಲಕರಾದ ಕರುಣಾಕರ ಹೆಗಡೆ, “ವೈದ್ಯಕೀಯ ಮತ್ತು ದಂತವೈದ್ಯಕೀಯ ಸೀಟುಗಳಿಗೆ ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ತೇರ್ಗಡೆ ಹೊಂದಿದ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕದ ವೈದ್ಯಕೀಯ ಕಾಲೇಜಿನಲ್ಲಿ ಸೀಟು ನೀಡಲು ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ.
ಆದರೆ, ಬೇರ್ಯಾವ ರಾಜ್ಯದಲ್ಲೂ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶ ನೀಡಿಲ್ಲ. ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ನಿರ್ಧಾರದಿಂದ ರಾಜ್ಯದ ಸಾವಿರಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳು ವೈದ್ಯಕೀಯ ಸೀಟಿನಿಂದ ವಂಚಿತರಾಗಲಿದ್ದಾರೆ,’ ಎಂದು ತಿಳಿಸಿದರು.
ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಯುವ ವೈದ್ಯರ ಸಂಘದ ಅಧ್ಯಕ್ಷ ಡಾ. ಭರತ್ ಕುಮಾರ್ ಮಾತನಾಡಿ, “ಅಖೀಲ ಭಾರತ ಮಟ್ಟದ ಶೇ.15ರಷ್ಟು ಸೀಟು ಯಾರಿಗೇ ಬೇಕಾದರೂ ಹಂಚಿಕೆ ಮಾಡಲಿ. ಆದರೆ, ಉಳಿದ ಶೇ.85ರಷ್ಟು ಸೀಟು ಕರ್ನಾಟಕದ ವಿದ್ಯಾರ್ಥಿಗಳಿಗೆ ನೀಡಬೇಕು.
ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವೈದ್ಯಕೀಯ ಸೀಟು ನೀಡುವುದರಿಂದ ರಾಜ್ಯದ ಯುವ ವೈದ್ಯರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ. ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ನಿರ್ಧಾರ ಖಂಡಿಸಿ ಜು.13ರಂದು ಬೆಂಗಳೂರಿನ ಮೈಸೂರ್ ಬ್ಯಾಂಕ್ ವೃತ್ತದಿಂದ ಮೌರ್ಯ ವೃತ್ತದ ತನಕ ಜಾಥ ನಡೆಸಿ, ನಂತರ ಬೃಹತ್ ಪ್ರತಿಭಟನೆ ಮಾಡಿ, ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದೇವೆ,’ ಎಂದರು.