Advertisement

ದಸರಾಗಾಗಿ 2500ಕ್ಕೂ ಅಧಿಕ ವಿಶೇಷ ಬಸ್‌ ಸೇವೆ

10:07 AM Sep 27, 2019 | Suhan S |

ಬೆಂಗಳೂರು: ದಸರಾ ಮಹೋತ್ಸವ ಹಾಗೂ ಸರಣಿ ರಜೆ ಪ್ರಯುಕ್ತ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನಿಗಮ (ಕೆಎಸ್‌ಆರ್‌ಟಿಸಿ) ಅ.4ರಿಂದ 8ರವರೆಗೆ ಹೆಚ್ಚುವರಿಯಾಗಿ ರಾಜ್ಯಾದ್ಯಂತ 2500ಕ್ಕೂ ಅಧಿಕ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಿದೆ.

Advertisement

ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ವೇಗದೂತ, ರಾಜಹಂಸ, ಐರಾವತ ಹಾಗೂ ಐರಾವತ ಕ್ಲಬ್‌ ಕ್ಲಾಸ್‌ (ಮಲ್ಟಿ ಆಕ್ಸಲ್‌) ಸಾರಿಗೆ ಸೇವೆಗಳ ಜತೆಗೆ 2,500ಕ್ಕೂ ಅಧಿಕ ಬಸ್‌ಗಳು ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್‌ ನಿಲ್ದಾಣದಿಂದ ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ. ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್‌, ಚೆನ್ನೈ, ಊಟಿ,ಕೊಡೈಕೆನಾಲ್‌, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ಬೆಂಗಳೂರಿನ ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್‌ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದ್ದು, ಮೊಬೈಲ್‌ ಮೂಲಕ ಎಂ ಬುಕಿಂಗ್‌ನ್ನು ಹಾಗೂ ಇ-ಟಿಕೆಟ್‌ ಬುಕಿಂಗ್‌ನ್ನು ಡಿಡಿಡಿ.ksrtc.in ವೆಬ್‌ಸೈಟ್‌ ಮುಖಾಂತರ ಮಾಡಬಹುದು. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್‌ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಪ್ರತ್ಯೇಕ ಮಾಹಿತಿ ಕೇಂದ್ರ ತೆರೆಯಲಾಗಿದೆ.

ಪ್ರಯಾಣಿಕರು ಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿಯಿಂದ ಒಟ್ಟು 708 ಗಣಕೀಕೃತ ಮುಂಗಡ ಆಸನ ಕಾಯ್ದಿರಿಸುವ ಕೌಂಟರ್‌ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಟಿಕೆಟ್‌ ಕಾಯ್ದಿರಿಸಿದರೆ ಶೇ. 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ದೊರೆಯಲಿದೆ.

ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿ ಕಾಯ್ದಿರಿಸ ಲಾಗಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್‌ ನಿಲ್ದಾಣ, ಪಿಕ್‌ಅಪ್‌ ಪಾಯಿಂಟ್‌ನ ಹೆಸರನ್ನು ಗಮನಿಸಬೇಕು. ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು, ಜಿಲ್ಲಾ ಬಸ್‌ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಬಸ್‌ ಗಳು ಸಂಚರಿಸಲಿವೆ. ಅ. 9ರಂದು ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ವಿಶೇಷ ವಾಹನಗಳು ಕಾರ್ಯಾಚರಿಸಲಿವೆ ಎಂದು ಕೆಎಸ್‌ಆರ್‌ಟಿ ತಿಳಿಸಿದೆ.

Advertisement

 ಮೈಸೂರು ಕಡೆ 350 ವಿಶೇಷ ಬಸ್‌ಗಳು :  ಬೆಂಗಳೂರಿನ ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 175 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೃಷ್ಣರಾಜ ಸಾಗರ ಅಣೆಕಟ್ಟು, ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್‌.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್‌.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 175 ವಾಹನಗಳು ಸೇರಿ ಒಟ್ಟಾರೆ 350 ಬಸ್‌ಗಳು ಕಾರ್ಯಾಚರಿಸಲಿವೆ.

Advertisement

Udayavani is now on Telegram. Click here to join our channel and stay updated with the latest news.

Next