ನವದೆಹಲಿ: ರಾಷ್ಟ್ರ ರಾಜಧಾನಿಯ ನಲ್ವತ್ತು ಶಾಲೆಗಳಿಗೆ ಸೋಮವಾರ(ಡಿ.9) ಬೆಳ್ಳಂಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವುದಾಗಿ ಎಂದು ದೆಹಲಿ ಪೊಲೀಸರು ತಿಳಿಸಿದ್ದು, ಬಾಂಬ್ ನಿಷ್ಕ್ರಿಯ ತಂಡ, ಶ್ವಾನ ದಳ ಶಾಲೆಗಳಿಗೆ ದೌಡಾಯಿಸಿದೆ.
ಆರ್‌ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಪಶ್ಚಿಮ ವಿಹಾರ್‌ನಲ್ಲಿರುವ ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್ ಸೇರಿದಂತೆ ದೆಹಲಿಯ 40 ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ.
ದೆಹಲಿ ಪೊಲೀಸರ ಪ್ರಕಾರ, ಭಾನುವಾರ ರಾತ್ರಿ 11.30 ರ ಸುಮಾರಿಗೆ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಸೋಮವಾರ ಬೆಳಿಗ್ಗೆ ಮೇಲ್ ಪರಿಶೀಲನೆ ನಡೆಸಿದ ವೇಳೆ ವಿಚಾರ ಬೆಳಕಿಗೆ ಬಂದಿದ್ದು ಕೂಡಲೇ ವಿಚಾರವನ್ನು ಶಾಲಾ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಅಲ್ಲದೆ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲೆಗೆ ರಜೆ ಘೋಷಣೆ ಮಾಡಿದ್ದಾರೆ.
ಘಟನೆ ಸಂಬಂಧ ಪೊಲೀಸರು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ತಂಡ ಶಾಲೆಗಳಿಗೆ ಧಾವಿಸಿ, ತಪಾಸಣೆ ನಡೆಸುತ್ತಿದ್ದಾರೆ, ಸದ್ಯ ಶಾಲಾ ಆವರಣದೊಳಗೆ ಪ್ರವೇಶ ನಿರ್ಬಂಧಿಸಲಾಗಿದ್ದು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಿಂಗಳ ಹಿಂದೆ ದೆಹಲಿ ಹಾಗೂ ಹೈದರಾಬಾದ್ ನ ಒಂದು ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು ಇದಾದ ಬಳಿಕ ಇಂದು ದೆಹಲಿಯ ನಲವತ್ತು ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯ ಶಾಲೆಗಳ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಯುತಿದ್ದು ಇದುವರೆಗೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.