ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯಡಿ ಅಕ್ಟೋಬರ್ 2018 ರಿಂದ ಡಿಸೆಂಬರ್ 2018 ರವರೆಗೆ 63 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ 63 ಪ್ರಕರಣಗಳಲ್ಲಿ 19 ಪ್ರಕರಣಗಳಿಗೆ ಪರಿಹಾರ ಮಂಜೂರು ಮಾಡಲಾಗಿದೆ. ಒಟ್ಟು 23 ಸಂತ್ರಸ್ತರು ಪರಿಹಾರಧನ ಪಡೆದಿದ್ದಾರೆ. 12 ಪ್ರಕರಣಗಳಿಗೆ ಪರಿಹಾರ ಧನ ವಿತರಿಸಲು ಕ್ರಮ ವಹಿಸಲಾಗಿದೆ. 6 ಪ್ರಕರಣಗಳು ಪರಿಹಾರಧನ ಮಂಜೂರಾತಿಗೆ ಬಾಕಿ ಉಳಿದಿದ್ದು, 26 ಪ್ರಕರಣಗಳಿಗೆ ಪೊಲೀಸ್ ಇಲಾಖೆಯಿಂದ ದೋಷಾರೋಪಣಾ ಪಟ್ಟಿ ಬರಲು ಬಾಕಿ ಇವೆ ಎಂದು ಹೇಳಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಮನವಿಗಳನ್ನು ಸಲ್ಲಿಸಿದಾಗ ಅಧಿಕಾರಿಗಳು ಅವುಗಳನ್ನು ಪರಿಶೀಲಿಸಿ ಶೀಘ್ರವಾಗಿ ಪರಿಹಾರ ಕಲ್ಪಿಸಬೇಕು. ಬಹುತೇಕ ಗ್ರಾಮಗಳಲ್ಲಿ ಸ್ಮಶಾನಕ್ಕೆ ಭೂಮಿ ನೀಡುವಂತೆ ಅರ್ಜಿಗಳು ಬರುತ್ತಿವೆ. ಕಂದಾಯ ಭೂಮಿ ಲಭ್ಯವಿಲ್ಲದ ಗ್ರಾಮಗಳಲ್ಲಿ ಖಾಸಗಿಯವರಿಂದ ಭೂಮಿ ಖರೀದಿಸಿ ಸ್ಮಶಾನಕ್ಕೆ ಭೂಮಿ ನೀಡುವಂತೆ ತಹಶೀಲ್ದಾರರಿಗೆ ತಿಳಿಸಿದರು.
ಸಮಿತಿಯ ಸದಸ್ಯ ರೇಣಾಕರಾಧ್ಯ ಮಾತನಾಡಿ, ದಲಿತರಿಗೆ ಫಾರಂ ನಂಬರ್ 53, 53(ಎ) ಮತ್ತು 94(ಸಿ) ಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಭೂಮಿ ಕೊಡಬೇಕೆಂದು ಸರ್ಕಾರ ನಿರ್ಣಯ ಮಾಡಿದರು ಅಧಿಕಾರಿಗಳು ನೀಡಿಲ್ಲ ಎಂದು ಸಭೆಯ ಗಮನಕ್ಕೆ ತಂದರು.
ಜಿಲ್ಲಾಧಿಕಾರಿಗಳು ಮಾತನಾಡಿ, ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಕುರಿತು ಭೂಮಿ ಮಂಜೂರು ಮಾಡಿಕೊಡುವಂತೆ ಉಪವಿಭಾಗಾಧಿಕಾರಿಗಳಿಗೆ ತಿಳಿಸಲಾಗಿದೆ. ವಸತಿ ರಹಿತ ಫಲಾನುಭವಿಗಳಿಗೆ ನಿವೇಶನ ಹಂಚಿಕೆಗೆ ಕಂದಾಯ ಮಂಜೂರು ಭೂಮಿ ಮಾಡಿಕೊಡುವ ಕುರಿತು ಶೃಂಗೇರಿ ತಹಶೀಲ್ದಾರರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಕುರಿತು ಕ್ರಮ ವಹಿಸಲಾಗುವುದು ಎಂದರು.
ಕಡೂರಿನ ಗ್ರಾಪಂಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 5 ಲಕ್ಷದವರೆಗಿನ ಕಾಮಗಾರಿ ನೀಡುತ್ತಿಲ್ಲ. ಸರ್ಕಾರದ ಆದೇಶ ಕಡೆಗಣಿಸಲಾಗಿದೆ ಎಂದು ಸದಸ್ಯರು ದೂರಿದಾಗ, ಕಡೂರು ತಾಪಂ ಇಒ ಅವರಿಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್‌ಪಾಂಡೆ, ಜಿ.ಪಂ ಉಪಕಾರ್ಯದರ್ಶಿ ರಾಜಗೋಪಾಲ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಹಾಜರಿದ್ದರು.