Advertisement

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

11:24 PM Jan 18, 2022 | Team Udayavani |

ಬೆಂಗಳೂರು: ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕದಲ್ಲಿ ಬಹುಕಾಲದಿಂದ ಸಂಗ್ರಹವಾಗಿರುವ “ಘನ ತ್ಯಾಜ್ಯ’ವನ್ನು ತೆರವುಗೊಳಿಸುವ ಮತ್ತು ನಿರ್ವಹಿಸುವ ಟೆಂಡರ್‌ ಅಂತಿಮಗೊಳಿಸಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಹೈಕೋರ್ಟ್‌ಗೆ ತಿಳಿಸಿದೆ.

Advertisement

ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕ ದಿಂದ ಆಗಿರುವ ಅನಾಹುತದ ಬಗ್ಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಪಾಲಿಕೆ ಈ ವಿಷಯ ತಿಳಿಸಿತು.

ಈ ವೇಳೆ ಮಂಗಳೂರು ಮಹಾನಗರ ಪಾಲಿಕೆ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ, ಘನತ್ಯಾಜ್ಯ ತೆರವು ಹಾಗೂ ನಿರ್ವಹಣೆಗೆ ಸಂಬಂಧಿಸಿದಂತೆ ಟೆಂಡರ್‌ ಅಂತಿಮಗೊಳಿಸಲಾಗಿದ್ದು, ಗುತ್ತಿಗೆದಾರರು ಗುರುತಿಸಲಾಗಿದೆ. ಟೆಂಡರ್‌ ಮೊತ್ತ 50 ಕೋ. ರೂ.ಗಳಿಗೂ ಅಧಿಕವಾಗಿದ್ದರೆ ಆರ್ಥಿಕ ಇಲಾಖೆಯ ಸಹಮತಿ ಪಡೆದುಕೊಳ್ಳಬೇಕು. ಅದಕ್ಕಾಗಿ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಟೆಂಡರ್‌ ಪರಿಶೀಲನ ಸಮಿತಿಗೆ ಸಲ್ಲಿಸಲಾಗಿದೆ. ಒಪ್ಪಿಗೆ ಸಿಕ್ಕ ತತ್‌ಕ್ಷಣ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಪರ ವಾದ ಪರಿಗಣಿಸಿದ ನ್ಯಾಯಪೀಠ, ಒಂದೊಮ್ಮೆ ನಿಗದಿತ ಸಮಯದಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸದಿದ್ದರೆ ಮುಂದಿನ ವಿಚಾರಣೆ ವೇಳೆ ಪಾಲಿಕೆ ಆಯುಕ್ತರು ಖುದ್ದು ಹಾಜರಾಗಬೇಕು ಎಂದು ತಾಕೀತು ಮಾಡಿ ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಿತು.

ನೀರು ಪರೀಕ್ಷೆಗೆ ನಾಲ್ಕು ವಾರ ಬೇಕಾ?
ಪಚ್ಚನಾಡಿ ಘನತ್ಯಾಜ್ಯ ಭೂಭರ್ತಿ ಘಟಕ ದಿಂದ ಬಿಡುಗಡೆಯಾದ ನೀರು ಸಮೀಪದ ಫ‌ಲ್ಗುಣಿ ನದಿ ಹಾಗೂ ಮರವೂರು ಜಲಾಶಯಸೇರುತ್ತಿದೆ. ಇದರಿಂದ ನೀರು ಕಲುಷಿತವಾಗಿ ರುವ ಹಿನ್ನೆಲೆಯಲ್ಲಿ ಆ ನೀರಿನ ಮಾದರಿ ಸಂಗ್ರಹಿಸಿ ವಿಶ್ಲೇಷಣ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್‌ ಆದೇಶಿಸಿತ್ತು. ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ ಮಂಡಳಿ ಪರ ವಕೀಲರು ಹಾಜರಾಗಿ,
ಮಧ್ಯಾಂತರ ವರದಿ ಸಲ್ಲಿಸಲಾಗಿದ್ದು, ಅಂತಿಮ ವರದಿ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ಕೋರಿದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ನ್ಯಾಯಪೀಠ ವರದಿ ಸಲ್ಲಿಸಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ತಾಕೀತು ಮಾಡಿವಿಚಾರಣೆ ಮುಂದೂಡಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next