Advertisement

ಪಂಚಮಸಾಲಿ ಮೀಸಲಾತಿಗೆ ಬಿಎಸ್‌ವೈ ಅಡ್ಡಿಪಡಿಸಿಲ್ಲ: ಮುರುಗೇಶ್‌ ನಿರಾಣಿ

08:10 PM Sep 21, 2022 | Team Udayavani |

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಡ್ಡಗಾಲು ಹಾಕಿಲ್ಲ. ಈ ಬಗ್ಗೆ ಕೇಳಿಬಂದಿರುವ ಆರೋಪ ಸತ್ಯಕ್ಕೆ ದೂರ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ್‌ ಆರ್‌. ನಿರಾಣಿ ಸ್ಪಷ್ಟಪಡಿಸಿದ್ದಾರೆ.

Advertisement

ಪಂಚಮಸಾಲಿ ಸಮುದಾಯದ ಜಯಮೃತ್ಯುಂಜಯ ಸ್ವಾಮೀಜಿಗಳು, ಯಡಿಯೂರಪ್ಪನವರು ತಮ್ಮ ಸಮುದಾಯಕ್ಕೆ ಮೀಸಲಾತಿ ಕೊಡಲು ಅಡ್ಡಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿದ್ದಾರೆ ಹೀಗಾಗಿ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಎಂದು ಕರೆ ಕೊಟ್ಟಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ನಿರಾಣಿ, ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸಲು ಬಿಎಸ್‌ವೈ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆಯೇ ಹೊರುತು, ಅಡ್ಡಿಪಡಿಸುವ ಕೆಲಸವನ್ನು ಎಂದೂ ಮಾಡಿಲ್ಲ. ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಪಂಚಮಸಾಲಿ ಸಮುದಾಯವನ್ನು ಅಭಿವೃದ್ಧಿಪಡಿಸುವ ಏಕೈಕ ಸದ್ದುದ್ದೇಶದಿಂದ ಪ್ರಾಧಿಕಾರ ರಚಿಸಿ 500 ಕೋಟಿ ರೂ. ಅನುದಾನ ಕೊಟ್ಟಿದ್ದರು. ಅದೇ ರೀತಿ 2ಎ ಮೀಸಲಾತಿ ಕೊಡುವ ಸಂಬಂಧ ಸಚಿವ ಸಂಪುಟ ಉಪಸಮಿತಿ ರಚಿಸಿದ್ದಾರೆ. ಅವರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಬಾರದು ಎಂದು ಹೇಳಿದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ. ಮೀಸಲು ಕಲ್ಪಿಸುವ ಸಂಬಂಧ ಅಧ್ಯಯನ ನಡೆಸುತ್ತಿರುವ ಆಯೋಗ ವರದಿ ನೀಡಿದ ನಂತರ ಸರ್ಕಾರ ಸೂಕ್ತ ಕ್ರಮ ವಹಿಸಲಿದೆ. ಮೀಸಲು ಸಂಬಂಧ ರಾಜ್ಯ ಸರ್ಕಾರ ಈಗಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶಿಫಾರಸು ಮಾಡಿದೆ. ಆಯೋಗವು ಕುಲಶಾಸ್ತ್ರ ಅಧ್ಯಯನ ನಡೆಸುತ್ತಿದೆ. ಅನಿವಾರ್ಯ ಕಾರಣಗಳಿಂದ ವಿಳಂಬವಾಗಿರುವುದಕ್ಕೆ ಟೀಕೆ ಮಾಡುವುದು ಸರಿಯಲ್ಲ ಎಂದು ಸಚಿವರು ವಿವರಿಸಿದರು.

ಯಡಿಯೂರಪ್ಪ ಹಾಗೂ ವಿಜಯೇಂದ್ರ ಪಂಚಮಸಾಲಿ ಲಿಂಗಾಯತರ ವಿರೋಧಿ ಎಂದು ಬಿಂಬಿಸುವ ಯತ್ನ ನಡೆಯುತ್ತಿದೆ. ಯಾರೋ ರಾಜಕೀಯ ಕಾರಣಕ್ಕೆ ಸ್ವಾಮೀಜಿಗಳ ಮನಸ್ಸು ಕೆಡಿಸಿದ್ದಾರೆ. ಯಡಿಯೂರಪ್ಪ ಹಾಗೂ ನನ್ನ ಹೆಸರನ್ನು ಈ ವಿಚಾರದಲ್ಲಿ ಪದೇ ಪದೆ ಎಳೆದು ತರುತ್ತಿದ್ದಾರೆ. ಯಡಿಯೂರಪ್ಪನವರು ಮೀಸಲಾತಿಗೆ ವಿರೋಧ ಮಾಡುತ್ತಿಲ್ಲ.
-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ

Advertisement
Advertisement

Udayavani is now on Telegram. Click here to join our channel and stay updated with the latest news.

Next