ಬೆಂಗಳೂರು: ಬಿಜೆಪಿ ಸರ್ಕಾರದ ನಾಯಕತ್ವ ವಿಚಾರಕ್ಕೆಸಂಬಂಧಿಸಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಪಕ್ಷದ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದು, ಸುಮಾರು 53 ಮಂದಿ ಶಾಸಕರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಿದ್ದಾರೆ. ಆದರೆ ಇದಾದ ಬಳಿಕ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಗುರುವಾರ ರಾತ್ರಿ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿಎಂ ಹುದ್ದೆಗೆ ಪಂಚಮಸಾಲಿ ಸಮುದಾಯವನ್ನು ಪರಿಗಣಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಬಿಎಸ್‌ವೈಗೆ ಶಾಸಕರ ಸಾಥ್ : 53 ಶಾಸಕರ ಅಭಿಮತ ಸಂಗ್ರಹಿಸಿದ ಅರುಣ್ ಸಿಂಗ್
ಪಂಚಮಸಾಲಿ ಸಮುದಾಯವು ರಾಜ್ಯದಲ್ಲಿ ಪ್ರಮುಖ ಸಮುದಾಯವಾಗಿದೆ. ಹೆಚ್ಚು ಮಂದಿ ಬಿಜೆಪಿ ಶಾಸಕರು ಕೂಡಾ ಇದೇ ಸಮುದಾಯದವರಾಗಿದ್ದಾರೆ. ಆದರೆ ಮುರುಗೇಶ್ ನಿರಾಣಿ ಮತ್ತು ಸಿ.ಸಿ.ಪಾಟೀಲ್ ಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಹೀಗಾಗಿ ಮುಂದಿನ ಮುಖ್ಯಮಂತ್ರಿ ಹುದ್ದೆಗೆ ತಮ್ಮ ಸಮುದಾಯದವರನ್ನೇ ಪರಿಗಣಿಸಬೇಕು ಎಂದು ಶ್ರೀಗಳು ಅರುಣ್ ಸಿಂಗ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ಸಿಎಂ ಯಡಿಯೂರಪ್ಪ ವಿರುದ್ಧವಾಗಿ ಶ್ರೀಗಳು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎನ್ನಲಾಗಿದೆ. ಉಸ್ತುವಾರಿ ಅರುಣ್ ಸಿಂಗ್ ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಲಿದ್ದು, ನಂತರ ಸಂಜೆ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.