ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಅಧಿಕಾರಿಗಳು ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.
ಸುಮಾರು ಎಂಟು ಹಂತಗಳಲ್ಲಿ ಮಾರ್ಚ್ ತಿಂಗಳಲ್ಲಿ ಬ್ಯಾಲೆಟ್ ಬಾಕ್ಸ್ ಗಳನ್ನು ಉಪಯೋಗಿಸಿ ಪ್ರತಿಯೊಂದು ಬ್ಯಾಕ್ ಗಳಲ್ಲಿನ ಸದಸ್ಯರ ಆಯ್ಕೆಗಾಗಿ ಪಂಚಾಯತ್ ಚುನಾವಣೆ ನಡೆಸಲಾಗುವುದು ಎಂದು ಜಮ್ಮು-ಕಾಶ್ಮೀರ ಮುಖ್ಯ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.
ಮಾರ್ಚ್ 5,7,9,12,14,16,18 ಹಾಗೂ 20ರಂದು ಪಂಚಾಯತ್ ಚುನಾವಣೆ ನಡೆಯಲಿದೆ. ಫೆಬ್ರುವರಿ 15ರಂದು ಮೊದಲ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದೆ.
ಕಳೆದ ವರ್ಷ ಆಗಸ್ಟ್ ನಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ಪ್ರಮುಖ ರಾಜಕೀಯ ಚುನಾವಣೆ ಇದಾಗಿದೆ. ಲಡಾಖ್ ಕೂಡಾ ಕೇಂದ್ರಾಡಳಿತ ಪ್ರದೇಶವಾಗಿದೆ.
ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಂಡ ನಂತರ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರದ ಆಡಳಿತ ಈಗ ಕೇಂದ್ರದ ಹತೋಟಿಯಲ್ಲಿದೆ. ಅಲ್ಲದೇ ಜಿಸಿ ಮುರ್ಮು ಅವರನ್ನು ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದೆ. ಕೇಂದ್ರಾಡಳಿತ ಪ್ರದೇಶದ ಕಾನೂನು ಸುವ್ಯವಸ್ಥೆಯನ್ನು ಕೂಡಾ ಕೇಂದ್ರವೇ ನಿರ್ವಹಿಸುತ್ತಿದೆ ಎಂದು ವರದಿ ತಿಳಿಸಿದೆ.