ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವ ಕುರಿತ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆ.3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಈ ವೇಳೆ ರಾಜ್ಯದ ಸರ್ಕಾರದ ಪರ ಹಾಜರಾದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ,ಆಯೋಗ ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆ.3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಫೆ.3ಕ್ಕೆ ಮುಂದೂಡಿತು.
ಪಂಚಮಸಾಲಿ ಸಮುದಾಯವು 2-ಎ ಮೀಸಲಾತಿಗಾಗಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ವರದಿ ಪಡೆದಿದ್ದ ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಹೊಸದಾಗಿ ಸೃಷ್ಟಿಸಿರುವ ಪ್ರವರ್ಗ “ಸಿ’ಗೆ ಮತ್ತು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ “ಡಿಗೆ ಸೇರ್ಪಡೆ ಮಾಡಲು ತೀರ್ಮಾನಿಸಿತ್ತು.
Related Articles
ಅರ್ಜಿಯನ್ನು 2023ರ ಜ.12ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಪಂಚಮಸಾಲಿ ಸೇರಿದಂತೆ ಲಿಂಗಾಯತ ಉಪ ಜಾತಿಗಳನ್ನು 3-ಬಿ ಮೀಸಲಾತಿ ಪ್ರವರ್ಗದಿಂದ 2-ಡಿ ಪ್ರವರ್ಗಕ್ಕೆ ಬದಲಿಸುವ ಪ್ರವರ್ಗಗಳ ಮರು ವಿಂಗಡಣೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ನಿರ್ದೇಶಿಸಿತ್ತು. ಜತೆಗೆ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶಿಸಿತ್ತು.