ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರಿಸುವ ಕುರಿತಾದ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಾಂತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರಕಾರ ಶುಕ್ರವಾರ ಹೈಕೋರ್ಟ್ಗೆ ಸಲ್ಲಿಸಿದೆ.
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಾಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಪಿ.ಬಿ. ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಸರಕಾರದ ಪರ ಹಾಜರಾದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ನ್ಯಾಯಾಲಯಕ್ಕೆ ಜ.30ರಂದು ನೀಡಿದ್ದ ಭರವಸೆಯಂತೆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಬಳಿಕ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ 2 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಫೆ.22ಕ್ಕೆ ಮುಂದೂಡಿತು.