ಬೆಂಗಳೂರು: ದ್ವೀತಿಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮೂರನೇ ಆರೋಪಿ ಈರಮಲ್ಲಪ್ಪನಿಗೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕ ಸದಸ್ಯಪೀಠದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಬುಧವಾರ ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು ಈಗಾಗಲೇ ಪ್ರಕರಣದ ಎಲ್ಲ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಿಐಡಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆದರೆ, ಸುಪ್ರೀಂಕೋರ್ಟ್ ಸಿಐಡಿ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಪ್ರಕರಣದಲ್ಲಿ ಅರ್ಜಿದಾರ ನೇರವಾಗಿ ಭಾಗಿಯಾಗಿಲ್ಲ. ಖಜಾನೆ ಇಲಾಖೆಯಿಂದ ಪ್ರಶ್ನೆ ಪತ್ರಿಕೆ ಹೊರ ತಂದಿದ್ದರಲ್ಲಿ ಈತನ ಪಾತ್ರವಿಲ್ಲ. ಬೇರೊಬ್ಬರು ಕೊಟ್ಟ ಪ್ರಶ್ನೆ ಪತ್ರಿಕೆಯನ್ನು ಈತ ತಲುಪಿಸಿದ್ದಾನೆ. ಹಾಗಾಗಿ ಈತನಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.
ಅರ್ಜಿದಾರರ ಪರ ವಕೀಲರ ವಾದವನ್ನು ಮಾನ್ಯ ಮಾಡಿದ ನ್ಯಾಯಪೀಠ, ಆರೋಪಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಈರಮಲ್ಲಪ್ಪ ಸಲ್ಲಿಸಿದ್ದ ಅರ್ಜಿಯನ್ನು ಅಧೀನ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಆತ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ.