ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದಿಯಾಗಿ ಬಿಜೆಪಿಯ ಘಟಾನುಘಟಿ ನಾಯಕರು ಆಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿ ಬಂದರೂ, “ಅಂತರ’ ಕಾಯ್ದುಕೊಂಡಿದ್ದ ಕಾಂಗ್ರೆಸ್ ಪಕ್ಷದ ಬಹುತೇಕ “ಹಿರಿ ತಲೆ’ಗಳು ಇದೀಗ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದ ಮೇಲೆ ಅವರ ಭೇಟಿಗೆ “ಪರೇಡ್’ ನಡೆಸಿದ್ದಾರೆ.
ಸಿದ್ದರಾಮಯ್ಯನವರು ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದ ಘಳಿಗೆಯಿಂದಲೂ ಅವರ ಆರೋಗ್ಯ ವಿಚಾರಿಸಲು ಕಾಂಗ್ರೆಸ್ ನಾಯಕರು ಒಬ್ಬರಾದ ಮೇಲೆ ಒಬ್ಬರಂತೆ ಧಾವಿಸಿ ಬರುತ್ತಿದ್ದಾರೆ. ವಿಶೇಷವಾಗಿ ಸಿದ್ದರಾಮಯ್ಯ ನಾಯಕತ್ವದ ಮೇಲೆ ಸದಾ ಕತ್ತಿ ಮಸಿಯುತ್ತಿದ್ದ ಮತ್ತು ಅವರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡುವ ವಿಚಾರದಲ್ಲಿ ಮುಂಚೂಣಿಯಲ್ಲಿರುತ್ತಿದ್ದ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಸೋಮವಾರ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದು ಗಮನಾರ್ಹ.
ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾಗ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು “ನನ್ನ ಬಹುಕಾಲದ ಒಡನಾಡಿ ಸಿದ್ದರಾಮಯ್ಯ’ ಶೀಘ್ರ ಗುಣಮುಖರಾಗಲಿ ಎಂದು ಟ್ವಿಟರ್‌ನಲ್ಲಿ ಹಾರೈಸಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ, ಡಿಸಿಎಂ ಡಾ. ಅಶ್ವಥನಾರಾಯಣ, ಸಚಿವರಾದ ಕೆ.ಎಸ್. ಈಶ್ವರಪ್ಪ, ಬಿ. ಶ್ರೀರಾಮುಲು, ಬಸವರಾಜ್ ಬೊಮ್ಮಾಯಿ ಮತ್ತಿತರ ಬಿಜೆಪಿ ಮುಖಂಡರು ಆಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದರು.
ಈ ಮಧ್ಯೆ, ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿ ಬಳಿಕ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದ ರಮೇಶ್ ಜಾರಕಿಹೊಳಿ, ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ್ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ “ಅವರು ಎಲ್ಲೇ ಇದ್ದರೂ ನಮ್ಮ ನಾಯಕರು’ ಎಂದು ಹೇಳಿದ್ದರು. ಎಚ್.ವಿಶ್ವನಾಥ್ ಆಸ್ಪತ್ರೆಗೆ ಬಂದು ಮಾನವೀಯತೆಯ ಭೇಟಿ ಎಂದಿದ್ದರು.
ಆದರೆ, ಆರ್.ವಿ.ದೇಶಪಾಂಡೆ, ಡಾ. ಜಿ. ಪರಮೇಶ್ವರ್, ಜಮೀರ್ ಅಹ್ಮದ್, ಕೆ.ಬಿ. ಕೋಳಿವಾಡ, ಪ್ರಕಾಶ್ ರಾಥೋಡ್ ಸೇರಿ ಕೆಲವರನ್ನು ಬಿಟ್ಟರೆ ಕಾಂಗ್ರೆಸ್ ಯಾವೊಬ್ಬ ಹಿರಿಯ ನಾಯಕರೂ ಆಸ್ಪತ್ರೆಗೆ ಭೇಟಿ ನೀಡಿರಲಿಲ್ಲ. ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೇಲೆ ಕಾಂಗ್ರೆಸ್ ನಾಯಕರು ಸಾಲು-ಸಾಲಾಗಿ ಸಿದ್ದರಾಮಯ್ಯನವರ ನಿವಾಸಕ್ಕೆ ಧಾವಿಸಿ ಬರುತ್ತಿದ್ದಾರೆ.
ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ಎಂ.ಬಿ. ಪಾಟೀಲ್ ಸೇರಿ ಕಾಂಗ್ರೆಸ್‌ನ ಕೆಲ ನಾಯಕರು ಸೋಮವಾರ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಭಾನುವಾರ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದರು.
ಹೈಕಮಾಂಡ್ ತೀರ್ಮಾನಿಸುತ್ತದೆ
ಬೆಂಗಳೂರು: ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ನವರು ರಾಜೀನಾಮೆ ಕೊಟ್ಟಿರುವುದು ಹೈಕಮಾಂಡ್‌ಗೆ, ಅವರು ನನಗೆ ರಾಜೀನಾಮೆ ಕೊಟ್ಟಿಲ್ಲ. ಹಾಗಾಗಿ, ಅವರ ರಾಜೀನಾಮೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳನ್ನು ಹಲವು ವಿಚಾರಗಳು ಬರುತ್ತಿದ್ದವು, ಅದೆಕ್ಕೆಲ್ಲ ತೆರೆ ಎಳೆಯೋದಕ್ಕೆ ಬಂದು ಸಿದ್ದರಾಮಯ್ಯವ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ ಎಂದರು.