ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.
ಜಾರಕಿಹೊಳಿ ಸಹೋದರರು ತಮ್ಮ ಜಿಲ್ಲೆಯ ರಾಜಕಾರಣದಲ್ಲಿ ಡಿ.ಕೆ. ಶಿವಕುಮಾರ್ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಜೊತೆ ಪರಮೇಶ್ವರ್ ಮಾತುಕತೆ ನಡೆಸಿ ತಾವು ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ನಿಲ್ಲುವ ಸಂದೇಶ ರವಾನಿಸಿದ್ದಾರೆ.
ಪ್ರಮುಖವಾಗಿ ಜಾರಕಿಹೊಳಿ ಸಹೋದರರ ನಡೆಯಿಂದ ಪಕ್ಷ ಹಾಗೂ ಸರ್ಕಾರಕ್ಕೆ ಆಗುತ್ತಿರುವ ಗೊಂದಲ ತಪ್ಪಿಸುವ ಕುರಿತು ಇಬ್ಬರು ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಮ್ಮ ಜಿಲ್ಲೆಯ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡದಂತೆ ತಾಕೀತು ಮಾಡಲು ಪಕ್ಷದ ನಾಯಕರಿಗೆ ಮನವಿ ಮಾಡಿಕೊಂಡಿದ್ದರು. ಆದರೆ, ಜಾರಕಿಹೊಳಿ ಸಹೋದರರ ಬೇಡಿಕೆಯನ್ನು ಪರೋಕ್ಷವಾಗಿ ತಳ್ಳಿಹಾಕಿರುವ ಡಾ.ಜಿ. ಪರಮೇಶ್ವರ್, ಡಿ.ಕೆ. ಶಿವಕುಮಾರ್ ಜಲ ಸಂಪನ್ಮೂಲ ಸಚಿವರಾಗಿರುವುದರಿಂದ ಅವರು ಅಲ್ಲಿಯ ಯೋಜನೆಗಳನ್ನೂ ನೋಡಬೇಕಲ್ಲ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಟ್ಟಡವನ್ನು ನಿರ್ಮಾಣ ಮಾಡುವ ಜವಾಬ್ದಾರಿಯನ್ನು ಡಿ.ಕೆ.ಶಿವಕುಮಾರ್‌ಗೆ ಒಪ್ಪಿಸಲಾಗಿದೆ.ಹಿಗಾಗಿ ಬೆಳಗಾವಿಗೆ ಹೋಗಿ ಬಂದಿದ್ದಾರೆ. ಇದನ್ನೇ ಹಸ್ತಕ್ಷೇಪ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ಈ ಬಗ್ಗೆ ಜಾರಕಿಹೊಳಿ ಸಹೋದರರ ಜೊತೆ ಮಾತನಾಡಿ ಬಗೆ ಹರಿಸುತ್ತೇವೆ ಎಂದು ಹೇಳಿದರು.