Advertisement

ಪಾರ್ಕಿಂಗ್‌ ಕಟ್ಟಡ ಜ.26ರಿಂದ ಬಳಕೆಗೆ

11:43 AM Sep 12, 2017 | Team Udayavani |

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ನಿರ್ಮಿಸುತ್ತಿರುವ ಬಹುಮಹಡಿ ವಾಹನ ನಿಲುಗಡೆ ಕಟ್ಟಡದ ಮೊದಲ ಹಂತದ ಕಟ್ಟಡ 2018ರ ಜನವರಿ 26ರಂದು ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು. 

Advertisement

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಬಿಎಂಪಿ ವತಿಯಿಂದ ನಿರ್ಮಿಸುತ್ತಿರುವ ವಾಹನ ನಿಲುಗಡೆ ಕಟ್ಟಡ ಕಾಮಗಾರಿಯನ್ನು ಸ್ಥಳೀಯ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಮೇಯರ್‌ ಜಿ.ಪದ್ಮಾವತಿ ಹಾಗೂ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರೊಂದಿಗೆ ಸೋಮವಾರ ಪರಿಶೀಲನೆ ನಡೆಸಿದರು. ಈ ವೇಳೆ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಎರಡು ವರ್ಷಗಳ ಹಿಂದೆಯೇ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆದರೆ, ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿಲ್ಲ. ಇಷ್ಟೊತ್ತಿಗಾಗಲೇ ಇಡೀ ಕಾಮಗಾರಿಯೇ ಪೂರ್ಣಗೊಳ್ಳಬೇಕಿತ್ತು. ಆದರೆ ಶೇ.50ರಷ್ಟು ಕಾಮಗಾರಿ ಮಾತ್ರ ಪೂರ್ಣಗೊಂಡಿದೆ ಎಂದು ದೂರಿದ ಸಚಿವರು, ಜನವರಿ ವೇಳೆಗೆ ಮೊದಲ ಹಂತ ಹಾಗೂ ಜೂನ್‌ ವೇಳೆಗೆ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸದಿದ್ದರೆ, ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಗಾಂಧಿನಗರ, ಮೆಜೆಸ್ಟಿಕ್‌ ಸೇರಿ ಹಲವು ಭಾಗಗಳಲ್ಲಿನ ಪಾರ್ಕಿಂಗ್‌ ಸಮಸ್ಯೆಗೆ ಪರಿಹಾರ ದೊರೆಯಲಿದೆ. 79.81 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಬಹು ಮಹಡಿ ವಾಹನ ನಿಲುಗಡೆಯ ಮೊದಲ ಹಂತ ಜನವರಿ 26ಕ್ಕೆ ಸಾರ್ವಜನಿಕರಿಗೆ ಮುಕ್ತವಾಗಲಿದ್ದು, ಜೂನ್‌ ವೇಳೆಗೆ ಸಂಪೂರ್ಣ ಕಾಮಗಾರಿ ಮುಗಿಯಲಿದೆ ಎಂದು ಮಾಹಿತಿ ನೀಡಿದರು. 

ಈಗಾಗಲೇ ಕಟ್ಟಡದ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಜನವರಿಯಿಂದಲೇ ಸಾರ್ವಜನಿಕರಿಗೆ ಕಟ್ಟಡವನ್ನು ಮುಕ್ತಗೊಳಿಸಲಾಗುವುದು. ಅದರಂತೆ ಜ.26ರಿಂದ 120 ಕಾರು ನಿಲುಗಡೆಗೆ ಅವಕಾಶವಿರಲಿದೆ. ಆ ಮೂಲಕ ಸ್ವಲ್ಪಮಟ್ಟಿಗೆ ವಾಹನ ದಟ್ಟಣೆ ಸಮಸ್ಯೆಗೆ ಪರಿಹಾರ ದೊರೆಯಲಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. 

Advertisement

ಈ ವೇಳೆ ಬಿಬಿಎಂಪಿ ಮುಖ್ಯ ಎಂಜಿನಿಯರ್‌ (ಯೋಜನೆ) ಕೆ.ಟಿ.ನಾಗರಾಜ್‌ ಸೇರಿದಂತೆ ಪ್ರಮುಖರು ಹಾಜರಿದ್ದರು. 

ಪ್ರತಿಭಟನೆಗೆ ಅವಕಾಶ
ಫ್ರೀಡಂ ಪಾರ್ಕ್‌ನಲ್ಲಿ ನಿರ್ಮಿಸುತ್ತಿರುವ ಬಹುಮಹಡಿ ವಾಹನ ನಿಲುಗಡೆ ಕಟ್ಟಡ ನಾಲ್ಕು ಮಹಡಿಗಳನ್ನು ಹೊಂದಿದ್ದು, ಆ ಪೈಕಿ ಮೂರು ಮಹಡಿಗಳಲ್ಲಿ ಪಾರ್ಕಿಂಗ್‌ ಅವಕಾಶ ನೀಡಲಾಗುತ್ತಿದೆ. ಉಳಿದ ಒಂದು ಮಹಡಿಯಲ್ಲಿ ಪ್ರತಿಭಟನೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಕಾಮಗಾರಿ ಆರಂಭದಿಂದಾಗಿ ಪ್ರತಿಭಟನೆ ನಡೆಸುವ ಜಾಗ ಕಡಿಮೆಯಾಗಿರುವುದರಿಂದಾಗಿ ಕಾಮಗಾರಿ ಪೂರ್ಣಗೊಂಡ ನಂತರ ಕಟ್ಟಡ ಮೇಲ್ಭಾಗದಲ್ಲಿ ಪ್ರತಿಭಟನೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next