ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೋಟದಪ್ಪ ಬಸವರಾಜು ಗೆಲುವು ಸಾಧಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳ ಹಿಂದೆ ವರುಣಾ ಕ್ಷೇತ್ರದ ಮೂಲಕ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೆ, ಆರಂಭದಲ್ಲಿ ವರುಣಾ ಕ್ಷೇತ್ರದಲ್ಲಿ ಒಂದಷ್ಟು ಗೊಂದಲಗಳಾಗಿದ್ದು ನಿಜ, ಈಗ ಎಲ್ಲವೂ ಸರಿಯಾಗಿದೆ. ಎಲ್ಲ ಮುಖಂಡರೂ ಸೇರಿ ಪಕ್ಷದ ಅಭ್ಯರ್ಥಿ ತೋಟದಪ್ಪ ಬಸವರಾಜು ಗೆಲುವಿಗೆ ಶ್ರಮಿಸಲಿದ್ದಾರೆ ಎಂದರು.
ನಾನು ಅಭ್ಯರ್ಥಿಯಾಗದಿದ್ದರೂ ಪಕ್ಷದ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ದುಡಿಯುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದೆ. ವರುಣಾ ಕ್ಷೇತ್ರದ ಜನರು ಜಾತ್ಯತೀತವಾಗಿ ನನಗೆ ಪ್ರೀತಿ ತೋರಿದ್ದಾರೆ. ಆರಂಭದಲ್ಲಿ ಉಂಟಾದ ಗೊಂದಲಗಳಿಗಾಗಿ ಕ್ಷೇತ್ರದ ಜನರ ಕ್ಷಮೆಯಾಚಿಸಿದ್ದೇನೆ ಎಂದು ಹೇಳಿದರು.
ಹಳೆ ಮೈಸೂರು ಭಾಗದ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಜೆಪಿಗೆ ಅಚ್ಚರಿಯ ಫಲಿತಾಂಶ ಬರಲಿದ್ದು, ಬಿಜೆಪಿಯ ಅಭ್ಯರ್ಥಿಗಳು ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಲಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೂಗೆಯಲು ಜನತೆ ತೀರ್ಮಾನಿಸಿದ್ದು, ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.
ಪಕ್ಷದ ಅಭ್ಯರ್ಥಿ ತೋಟದಪ್ಪ ಬಸವರಾಜು, ಮಾಜಿ ಸಂಸದೆ ತೇಜಸ್ವಿನಿ ರಮೇಶ್, ಮುಖಂಡರಾದ ಕಾ.ಪು.ಸಿದ್ದಲಿಂಗಸ್ವಾಮಿ, ಪುಟ್ಟಬುದ್ದಿ, ನಂಜುಂಡಸ್ವಾಮಿ, ಅಪ್ಪಣ್ಣ, ರಘು ಕೌಟಿಲ್ಯ ಗೋಷ್ಠಿಯಲ್ಲಿದ್ದರು.