ಜಾಲಹಳ್ಳಿ: ಸ್ಥಳೀಯ ಬಸ್ ನಿಲ್ದಾಣದ ಆವರಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ತಾತ್ಕಾಲಿಕ ಶೆಡ್ ನಿರ್ಮಿಸಬೇಕೆಂದು ಜಾಲಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರಯಾಣಿಕರು ಆಗ್ರಹಿಸಿದ್ದಾರೆ. ಗ್ರಾಮದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ 80 ಲಕ್ಷ ರೂ. ಮಂಜೂರಾಗಿದ್ದು, ಕಾಮಗಾರಿ ಗುತ್ತಿಗೆಯನ್ನು ಸಿರವಾರ ಮೂಲದ ಗುತ್ತಿಗೆದಾರರಿಗೆ ವಹಿಸಲಾಗಿದೆ. ಗುತ್ತಿಗೆದಾರರು ಕಾಮಗಾರಿ ಆರಂಭಿಸುವ ಸಲುವಾಗಿ ಬಸ್ ನಿಲ್ದಾಣದ ಹಳೆ ಕಟ್ಟಡವನ್ನು ನೆಲಸಮಗೊಳಿಸಿದ್ದಾರೆ. ಹೀಗಾಗಿ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು ಬಸ್ ಗಾಗಿ ಬಿಸಿಲು, ಮಳೆಯಲ್ಲಿ ಕಾಯುವಂತಾಗಿದೆ. ಬಸ್ ನಿಲ್ದಾಣ ಕಾಮಗಾರಿ ಪೂರ್ಣಕ್ಕೆ ಕನಿಷ್ಠ ಒಂದು ವರ್ಷವಾದರೂ ಬೇಕಾಗಬಹುದು. ಅಲ್ಲಿಯವರೆಗೆ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ. ತಾತ್ಕಾಲಿಕ ಶೆಡ್ ನಿರ್ಮಿಸುವಂತೆ ಸಾರಿಗೆ ಸಂಸ್ಥೆಯ ಎಇಇ ರಘುನಂದ ಅವರಿಗೆ ಹಲವು ಬಾರಿ ದೂರವಾಣಿ ಮೂಲಕ ವಿನಂತಿಸಿದರೂ ಯಾವದೇ ಪ್ರಯೋಜನವಾಗಿಲ್ಲ. ಎಇಇಯವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ವಿಚಾರಿಸಿದರೆ ಗುತ್ತಿಗೆದಾರರಿಗೆ ಹೇಳಿದ್ದೇನೆ ಎನ್ನುತ್ತಾರೆ. ಈ ಕುರಿತು ಹಲವು ಬಾರಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಸ್ಥೆಯ ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿದೆ. ಅವರು ಶೆಡ್ ನಿರ್ಮಿಸುವ ಭರವಸೆ ನೀಡಿದ್ದಾರೆಯೇ ಹೊರತು ಆದು ಇನ್ನು ಕಾರ್ಯರೂಪಕ್ಕೆ ತಂದಿಲ್ಲ ಎಂದು ಪ್ರಯಾಣಿಕರು ದೂರಿದ್ದಾರೆ. ಪುರುಷರು ಅಂಗಡಿ, ಹೋಟಲ್ ಗಳಲ್ಲಿ ಕೂಡ್ರಬಹುದು. ಆದರೆ ಮಹಿಳೆಯರು, ವಿದ್ಯಾರ್ಥಿಗಳು ಬಸ್ ನಿಲ್ದಾಣದ ಆವರಣದ ಬಯಲಲ್ಲೇ ಮಳೆ, ಗಾಳಿ, ಬಿಸಿಲು ಎನ್ನದೇ ಕುಳಿತುಕೊಳ್ಳಬೇಕಾಗಿದೆ. ಆದ್ದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ತಾತ್ಕಾಲಿಕ ಶೆಡ್ ನಿರ್ಮಿಸಬೇಕೆಂದು ಗ್ರಾಮಸ್ಥರು, ಪ್ರಯಾಣಿಕರು ಆಗ್ರಹಿಸಿದ್ದಾರೆ.