ಚೆನ್ನೈ: ಇಲ್ಲಿನ ಕಲೈನರ್ ಸೆಂಟಿನರಿ ಸರಕಾರಿ ಆಸ್ಪತ್ರೆಯಲ್ಲಿ ಬುಧವಾರ(ನ13) ವೈದ್ಯರೊಬ್ಬರಿಗೆ ರೋಗಿಯ ಮಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯ ಡಾ.ಬಾಲಾಜಿ ಅವರಿಗೆ ಏಳು ಇರಿತದ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿ, ಚೆನ್ನೈ ನಿವಾಸಿ ವಿಘ್ನೇಶ್ ಎಂಬಾತನನ್ನು ಬಂಧಿಸಲಾಗಿದೆ. ಆತನ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕ್ಯಾನ್ಸರ್ ವಾರ್ಡ್ ನಲ್ಲಿ ಈ ಘಟನೆ ನಡೆದಿದ್ದು, ಡಾ.ಬಾಲಾಜಿ ಕೆಲಸ ಮಾಡುತ್ತಿದ್ದ ವೇಳೆ ವಿಘ್ನೇಶ್ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಆತನನ್ನು ಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಗಾಯಗೊಂಡ ವೈದ್ಯರಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಮತ್ತು ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಸೂಚಿಸಿರುವುದಾಗಿ ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ನಮ್ಮ ಸರ್ಕಾರಿ ವೈದ್ಯರ ನಿಸ್ವಾರ್ಥ ಕೆಲಸ ಅಪಾರವಾಗಿದೆ, ಅವರ ಸುರಕ್ಷತೆಯನ್ನು ಖಚಿತಪಡಿಸುವುದು ನಮ್ಮ ಕರ್ತವ್ಯ, ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಸಿಎಂ ಹೇಳಿದ್ದಾರೆ.
ಕೊಲ್ಕಾತ್ತಾದಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ದೇಶಾದ್ಯಂತ ವೈದ್ಯರು ಆಕ್ರೋಶ ವ್ಯಕ್ತ ಪಡಿಸಿ ಕಳವಳ ಹೊರ ಹಾಕಿದ ಬಳಿಕ ಈ ಘಟನೆ ನಡೆದಿದ್ದು ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ವೈದ್ಯರ ರಕ್ಷಣೆಗೆ ತುರ್ತು ಕಠಿನ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ.