ಚಿಕ್ಕಬಳ್ಳಾಪುರ: ಎಲ್ಲಾ ಧರ್ಮ, ಜಾತಿಗಳು ಒಂದೇ ಎಂಬ ಮನೋಭಾವ ಬೆಳೆಸಿಕೊಂಡು ಜಿಲ್ಲೆಯ ಜನತೆ ಭಾವೈಕ್ಯತೆಗೆ ಆದ್ಯತೆ ನೀಡಬೇಕು ಹಾಗೂ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ನ್ನು ನಿಷೇಧಿಸಿ, ಹಸಿರು ಕ್ರಾಂತಿಗೆ ನಾಂದಿ ಹಾಡಬೇಕೆಂದು ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಜಿಲ್ಲಾ ದಶ ಮಾನೋತ್ಸವ ಕಾರ್ಯಕ್ರಮದ ಸಮಾರೋಪದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.
ನಗರದ ಸರ್ ಎಂ.ವಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಪಂ ವತಿಯಿಂದ ಕಳೆದ ಶುಕ್ರವಾರದಿಂದ ಹಮ್ಮಿಕೊಂಡಿದ್ದ ಜಿಲ್ಲಾ ದಶಮಾನೋತ್ಸವದಲ್ಲಿ ಜಿಲ್ಲೆ ರಚನೆಗಾಗಿ ಹೋರಾಡಿದ ಹಲವು ಮುಖಂಡರನ್ನು ಸನ್ಮಾನಿಸಿ ಮಾತನಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಗೆ 10 ವರ್ಷಗಳು ತುಂಬಿದ್ದು, ಪ್ರತ್ಯೇಕ ಜಿಲ್ಲೆಗಾಗಿ ಹೋರಾಡಿದ ಪ್ರತಿಯೊಬ್ಬರನ್ನೂ ಈ ಸುಸಂದರ್ಭದಲ್ಲಿ ನೆನೆಪಿಸಿಕೊಳ್ಳಬೇಕು. ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯನ್ನು ಅಭಿವೃದ್ಧಿ ಪಡಿಸಿದ್ದು, ಸರ್ಕಾರ ಈ ಭಾಗದ ಜನರ ಕುಡಿಯುವ ನೀರು ಒದಗಿಸುವುದಕ್ಕಾಗಿ ಎತ್ತಿನಹೊಳೆ ಯೋಜನೆ ರೂಪಿಸಿದೆ. ಈ ಮೂಲಕ ಜಿಲ್ಲೆಯ ಜನರ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬಹುದಾಗಿದೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯನ್ನಾಗಿ ಘೋಷಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಸ್ಮರಿಸಿ, ಜಿಲ್ಲೆಯಾಗಿ ರೂಪುಗೊಳ್ಳಲು ಕಳೆದ ನಾಲ್ಕೂವರೆ ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜಿಲ್ಲಾ ಕೇಂದ್ರದ ಅಭಿವೃದ್ಧಿ ಬರೋಬ್ಬರಿ 100 ಕೋಟಿ ರೂ., ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಟೆಂಡರ್ ಪ್ರಕ್ರಿಯೆ ಮುಗಿದಿದೆ.
ಹಂತ ಹಂತವಾಗಿ ಕಾಮಗಾರಿಗಳನ್ನು ನಿರ್ವಹಿಸಲಾಗುವುದು ತಿಳಿಸಿದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ, ಉಪಾಧ್ಯಕ್ಷೆ ನಿರ್ಮಲಾ, ಶಿಢ್ಲಘಟ್ಟ ಶಾಸಕ ಎಂ.ರಾಜಣ್ಣ, ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ, ಜಿಪಂ ಸಿಇಒ ಗುರುದತ್ತ್ ಹೆಗಡೆ, ಎಸ್ಪಿ ಕಾರ್ತಿಕ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಕೆ.ಅನುರಾಧ, ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವನಳ್ಳಿ ಎನ್.ರಮೇಶ್, ತಾಲೂಕು ಪಂಚಾಯ್ತಿ ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ, ನಗರಸಭೆ ಅಧ್ಯಕ್ಷ ಮುನಿಕೃಷ್ಣ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಡಾ.ಸಿದ್ದರಾಮಯ್ಯ, ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ, ತಹಶೀಲ್ದಾರ್ ಕೆ. ನರಸಿಂಹಮೂರ್ತಿ, ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.