Advertisement

ಪೋಲಿಯೋ ಮಾದರಿಯಲ್ಲೇ ದಡಾರ ಲಸಿಕಾ ಅಭಿಯಾನ

11:40 AM Feb 06, 2017 | |

ಬೆಂಗಳೂರು: ಪೋಲಿಯೋ ಮಾದರಿಯಲ್ಲೇ ದಡಾರ ಮತ್ತು ರುಬೆಲ್ಲಾ ರೋಗಗಳ ನಿರ್ಮೂಲನೆಗೆ ಸಂಕಲ್ಪ ಮಾಡಲಾಗಿದೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವ ಫ‌ಗ್ಗನ್‌ ಸಿಂಗ್‌ ಕುಲಾಸ್ತೆ ಹೇಳಿದರು. 

Advertisement

ವಿಧಾನಸೌಧದಲ್ಲಿ ಭಾನುವಾರ ನಡೆದ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಪೋಲಿಯೋ ಅನ್ನು ಹೇಗೆ ನಿರ್ಮೂಲನೆ ಮಾಡಲಾಗಿದೆಯೋ, ಅದೇ ಮಾದರಿಯಲ್ಲಿ ದಡಾರ ಮತ್ತು ರುಬೆಲ್ಲಾ ಕಾಯಿಲೆ ನಿರ್ಮೂಲನೆಗೆ ದೇಶದೆಲ್ಲೆಡೆ ಈ ಲಸಿಕಾ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಸುಮಾರು 41 ಕೋಟಿ ಮಕ್ಕಳಿಗೆ ದಡಾರ ಮತ್ತು ರಬೆಲ್ಲಾ ಲಸಿಕೆ ಹಾಕುವ ಗುರಿ ಇಟ್ಟುಕೊಳ್ಳಲಾಗಿದೆ. ಆ ಮೂಲಕ ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಹೀಗಾಗಿ, ದೇಶದ ಜನತೆ ಕೂಡ ಪೋಲಿಯೋ ನಿರ್ಮೂಲನೆಗೆ ನೀಡಿದಷ್ಟೇ ಸಹಕಾರವನ್ನು ದಡಾರ ಮತ್ತು ರುಬೆಲ್ಲಾ ರೋಗಗಳ ನಿರ್ಮೂಲನೆಗೂ ನೀಡಬೇಕು ಎಂದು ಸಚಿವರು ಮನವಿ ಮಾಡಿದರು.

ಕೇಂದ್ರ ಸಚಿವ ಅನಂತಕುಮಾರ್‌ ಮಾತನಾಡಿ, ದೇಶದಲ್ಲಿ ಸಾಂಕ್ರಾಮಿಕ ರೋಗಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ದಡಾರ ಮತ್ತು ರುಬೆಲ್ಲಾ ಲಸಿಕಾ ಯೋಜನೆಯನ್ನು ಶೇ.100ರಷ್ಟು ಯಶಸ್ವಿಗೊಳಿಸುವುದಕ್ಕೆ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಹೀಗಾಗಿ, ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ದಡಾರ ಮತ್ತು ರುಬೆಲ್ಲಾ ಚುಚ್ಚುಮದ್ದು ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಾಂಖೀಕ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಸಚಿವ ಡಿ.ವಿ. ಸದಾನಂದಗೌಡ ಮಾತನಾಡಿ, ಈ ಲಸಿಕಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳು ಕೂಡ ಕಾರ್ಯಕ್ರಮಗಳನ್ನು ರೂಪಿಸಿಕೊಂಡಿವೆ. ಈ ಸಂಬಂಧ, ಕೇಂದ್ರ ಸರ್ಕಾರವು ಆರೋಗ್ಯ ಇಲಾಖೆಗೆ ಈಗಾಗಲೇ ಒಟ್ಟು 47352 ಕೋಟಿ ರೂ. ಬಿಡುಗಡೆ ಮಾಡಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ, 1200 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

Advertisement

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಕೆ.ಆರ್‌.ರಮೇಶ್‌ ಕುಮಾರ್‌ ಮಾತನಾಡಿ, ಮಕ್ಕಳು, ಯುವಕರು ಸೇರಿದಂತೆ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಕಲ್ಪಿಸುವುದು ಸರ್ಕಾರದ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನವನ್ನು ಜನಪ್ರಿಯಗೊಳಿಸಲು ಸಾರ್ವಜನಿಕರ ಸಹಕಾರ ಬಹಳ ಅಗತ್ಯ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌, ರಾಜ್ಯದ 6 ಕೋಟಿ ಜನರ ಆರೋಗ್ಯ ಸುಧಾರಣೆಗೆ ರಾಜ್ಯ ಸರ್ಕಾರ ಹಲವು ಕಾರ್ಯಯೋಜನೆ ಹಮ್ಮಿಕೊಂಡಿದೆ ಎಂದು ಹೇಳಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂಟಿಯಾ ಮಾತನಾಡಿ, ಇಡೀ ದೇಶದಲ್ಲೇ ನಮ್ಮ ರಾಜ್ಯ ಮೊದಲ ಬಾರಿಗೆ ದಡಾರ ಮತ್ತು ರುಬೆಲ್ಲಾ ನಿರ್ಮೂಲನೆಗೆ ಪಣ ತೊಟ್ಟಿದೆ.

ಮೊದಲ ಹಂತವಾಗಿ ಶಾಲೆಗಳ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ಬಳಿಕ ಅಂಗನವಾಡಿ ಮತ್ತು ಮನೆ-ಮನೆಗಳಿಗೆ ಭೇಟಿ ನೀಡುವ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲಾಗುವುದು ಎಂದರು.  ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌, ನಟ ರಮೇಶ್‌ ಅರವಿಂದ್‌ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next