ಬಾಗಲಕೋಟೆ: ಗ್ರಾಮೀಣ ಭಾಗದಲ್ಲಿ ಮೂಢನಂಬಿಕೆ, ಅನಿಷ್ಟ ಪದ್ದತಿಗಳು ಇನ್ನು ಜೀವಂತವಿದ್ದು, ಇವುಗಳನ್ನು ಹೋಗಲಾಡಿಸಲು ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ತಡೆಗಟ್ಟುವಲ್ಲಿ ಪಿಡಿಒಗಳ ಪಾತ್ರ ಮುಖ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎಸ್. ದೇಶಪಾಂಡೆ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ ಹಾಗೂ ಯುನಿಸೆಫ್ ಸಹಯೋಗದಲ್ಲಿ ಕ್ರಿಯಾಶೀಲ ಮಕ್ಕಳ ಗ್ರಾಮಸಭೆ ಅನುಷ್ಠಾನ, ಮಕ್ಕಳ ಹಕ್ಕುಗಳು ಮತ್ತು ಸಂರಕ್ಷಣೆಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಕುರಿತು ಪಂಚಾಯಿತಿ ಅಭಿವೃದ್ಧಿ ಅ ಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯ, ಅಪೌಷ್ಟಿಕತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳಲ್ಲಿ, ಮಕ್ಕಳ ಮೂಲಕ ಪಾಲಕರಲ್ಲಿ ಅರಿವು ಮೂಡಿಸಿ ಬಾಲ್ಯವಿವಾಹ ತಡೆಯುವ ಕೆಲಸವಾಗಬೇಕು. ಈ ಕಾರ್ಯದಲ್ಲಿ ಪಿಡಿಒಗಳ ಪಾತ್ರ ಮುಖ್ಯವಾಗಿರುವ ಹಿನ್ನೆಲೆಯಲ್ಲಿ ಇಂತಹ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಮಾತನಾಡಿ, ಸರಕಾರಿ ವೃತ್ತಿಯಲ್ಲಿ ಸಾಧಿಸಲು ಹೊರಡುವರಿದ್ದರೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಲ್ಯವಿವಾಹ ನಿಷೇಧದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಹೆಣ್ಣು ಮಕ್ಕಳನ್ನು ರಕ್ಷಿಸುವ ಗುರಿ ಇಟ್ಟುಕೊಳ್ಳಬೇಕು. ಇಂತಹ ಸಾಮಾಜಿಕ ಪಿಡುಗು ತೊಡೆದು ಹಾಕಲು ಸಾಧ್ಯವಾಗುತ್ತದೆ. ಈ ಕಾರ್ಯದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಪಡೆಯಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ. ಭೂಬಾಲನ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಮಕ್ಕಳ ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ಕೈಗೊಂಡು ಮಕ್ಕಳ ಸಮಸ್ಯೆ ಆಲಿಸಬೇಕು. ಮಕ್ಕಳಲ್ಲಿನ ಪೌಷ್ಠಿಕತೆ ಮಹತ್ವದ ಅಂಶವಾಗಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ವ್ಯಾಪ್ತಿಯ ಅಂಗನವಾಡಿ ಶಾಲೆಗಳಿಗೆ ಭೇಟಿ ನೀಡಬೇಕು. ಸರಕಾರದಿಂದ ಮಕ್ಕಳಿಗೆ ಸಿಗಬೇಕಾದ ಸೌಲಭ್ಯ ಹಾಗೂ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಪಸ್ತಾಪುರ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಗುಲಾಬ ನದಾಫ್ ಕಾರ್ಯಾಗಾರ ಕುರಿತು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಕೊಪ್ಪಳ ಯುನಿಸೆಫ್‌ನ ರಾಘವೇಂದ್ರ ಭಟ್, ಹರೀಶ ಜೋಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಸ್ತಗಿರಿಸಾಬ ಮುಲ್ಲಾ, ಮಕ್ಕಳ ರಕ್ಷಣಾಧಿಕಾರಿ ಕೇಶವದಾಸ ಉಪಸ್ಥಿತರಿದ್ದರು.